ಶಿವಮೊಗ್ಗ:ಜಿಲ್ಲೆಯ ಹಲವು ಕಡೆಗಳಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯನ್ನು ಸರಿಪಡಿಸಲು ಜಿಲ್ಲಾಡಳಿತ ಸರ್ವ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಜಿ. ಶಿವಕುಮಾರ್ ತಿಳಿಸಿದರು.
ಜಿಲ್ಲಾ ನೋಡಲ್ ಕಾರ್ಯದರ್ಶಿ ಮಣಿವಣ್ಣನ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿ ಪರಿಸ್ಥಿತಿ ಎದುರಿಸಲು ಆಡಳಿತ ಯಂತ್ರ ಸಿದ್ದವಾಗಿದೆ. ಯಾವುದೇ ತೊಂದರೆ ಉಂಟಾದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಅತಿ ಮಳೆಯಿಂದಾಗಿ ಜಿಲ್ಲೆಯಲ್ಲಿ 2 ಜೀವ ಹಾನಿ ಸಂಭವಿಸಿದ್ದು, 9 ಜಾನುವಾರುಗಳು ಸಾವನ್ನಪ್ಪಿವೆ. 201 ಮನೆಗಳು ಭಾಗಶಃ ಹಾನಿಗೀಡಾಗಿವೆ. ಸುಮಾರು 7,748 ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕಾ ಜಮೀನಿಗೆ ನೀರು ನುಗ್ಗಿ ತೊಂದರೆಯಾಗಿದೆ. ಜೀವ ಹಾನಿ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ನೀಡಲಾಗುತ್ತಿದ್ದು, ಬೆಳೆ ಹಾನಿ ಬಗ್ಗೆ ಸಮೀಕ್ಷೆ ನಡೆಸಿ ಆದಷ್ಟು ಬೇಗ ಪರಿಹಾರ ನೀಡಲು ಸೂಚನೆ ನೀಡಲಾಗಿದೆ ಎಂದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಕಂಟ್ರೋಲ್ ರೂಂ:
ನೆರೆ ಪರಿಸ್ಥಿತಿ ಬಗ್ಗೆ ದಿನದ 24 ಗಂಟೆಯಬ ನಿಗಾ ಇರಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ಹಿರಿಯ ಅಧಿಕಾರಿಯೊಬ್ಬರನ್ನು ಮೇಲುಸ್ತುವಾರಿಗೆ ನಿಯೋಜಿಸಲಾಗಿದೆ. ದೂರವಾಣಿ ಸಂಖ್ಯೆ 1077 ಮಾತ್ರವಲ್ಲದೆ, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಸಾಧ್ಯವಾಗುವಂತೆ ವಾಟ್ಸಾಪ್ ಮೊಬೈಲ್ ಸಂಖ್ಯೆ 8296283691 ಇದ್ದು, ಸಾರ್ವಜನಿಕರು ನೆರೆ ಹಾವಳಿ ಸಂಬಂಧಿಸಿದಂತೆ ಛಾಯಾಚಿತ್ರ, ವಿಡಿಯೋಗಳನ್ನು ಇದರಲ್ಲಿ ಅಪ್‍ಲೋಡ್ ಮಾಡಿ ಜಿಲ್ಲಾಡಳಿತದ ಗಮನಕ್ಕೆ ತರಬಹುದಾಗಿದೆ ಎಂದರು.
ಮಣಿವಣ್ಣನ್ ಮಾತನಾಡಿ, ಜಿಲ್ಲೆಯಲ್ಲಿ ಸದ್ಯಕ್ಕೆ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಜಿಲ್ಲಾಡಳಿತದ ವತಿಯಿಂದ ತಕ್ಷಣ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ. ಮಳೆ ಒಂದೆರಡು ದಿನ ಮುಂದುವರೆದರೆ ಕೆಲವೆಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿರುವ ಕಾರಣ ಸಹಾಯಕ್ಕೆ ಸಜ್ಜಾಗಿರುವಂತೆ ಎನ್‍ಡಿಆರ್‌ಎಫ್ ತಂಡಕ್ಕೆ ಮನವಿ ಮಾಡಲಾಗಿದೆ. ಸಾರ್ವಜನಿಕರು ಗಾಬರಿಗೊಳ್ಳುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದ್ರು.