ಕರ್ನಾಟಕ

karnataka

ETV Bharat / state

ಸುಗಮವಾಗಿ ಪರೀಕ್ಷೆ ನಡೆಸಲು ಸಂಪೂರ್ಣ ಸಿದ್ಧತೆ: ಸಚಿವ ಕೆ. ಎಸ್. ಈಶ್ವರಪ್ಪ - PUC examination

ವಿದ್ಯಾರ್ಥಿಗಳು ಹಾಲ್ ಟಿಕೆಟ್ ಪಡೆಯಲು ಬರುವ ಸಂದರ್ಭದಲ್ಲಿ 3 ಮಾಸ್ಕ್ ಒದಗಿಸಲು ಸೂಚಿಸಲಾಗಿದೆ. ಸುಗಮವಾಗಿ ಪರೀಕ್ಷೆ ನಡೆಸಲು ಸರ್ಕಾರದ ವತಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

All measures have been taken by the government to conduct the examination: Eshwarappa
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ

By

Published : Jun 17, 2020, 4:06 PM IST

ಶಿವಮೊಗ್ಗ: ದ್ವಿತೀಯ ಪಿಯುಸಿ ಮತ್ತು ಎಸ್​ಎಸ್​ಎಲ್​ಸಿ ಪರೀಕ್ಷೆ ವೇಳೆ ಯಾವುದೇ ವಿದ್ಯಾರ್ಥಿಗೆ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಪರೀಕ್ಷೆ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಯುಸಿ ಪರೀಕ್ಷೆ ನಡೆಯಲಿರುವ ಎಲ್ಲಾ 33 ಕೇಂದ್ರಗಳನ್ನು ಈಗಾಗಲೇ ಎರಡು ಬಾರಿ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಪರೀಕ್ಷೆಗೆ ಕೊಠಡಿಯನ್ನು ಹಸ್ತಾಂತರಿಸುವ ಪೂರ್ವದಲ್ಲಿ ಇನ್ನೊಮ್ಮೆ ಸ್ಯಾನಿಟೈಸ್ ಮಾಡಲು ಸೂಚಿಸಲಾಗಿದೆ. ಪ್ರತಿಯೊಬ್ಬರಿಗೂ ಮಾಸ್ಕ್ ಧರಿಸಿಕೊಂಡು ಬರುವಂತೆ ಸೂಚಿಸಲಾಗಿದೆ. ಆದರೂ ಪ್ರತಿಯೊಬ್ಬ ವಿದ್ಯಾರ್ಥಿಗೂ ಒಂದು ಮಾಸ್ಕ್ ಒದಗಿಸಬೇಕು. ಇದೇ ರೀತಿ ದೂರದಿಂದ ಬರುವ ವಿದ್ಯಾರ್ಥಿಗಳಿಗೆ ನೀರು ಹಾಗೂ ಬಿಸ್ಕಿಟ್ ಪ್ಯಾಕೇಟ್ ನೀಡಲು ಸೂಚನೆ ನೀಡಲಾಗಿದೆ ಎಂದರು.

ಪಿಯು ವಿದ್ಯಾರ್ಥಿಗಳಿಗಾಗಿ ಒಟ್ಟು 129 ರೂಟ್‍ಗಳಿಗೆ 133 ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಬಸ್​ನಲ್ಲಿ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಏನಾದರೂ ಅನಾನುಕೂಲತೆ ಉಂಟಾದರೆ ನೋಡಲ್ ಅಧಿಕಾರಿ ಜವಾಬ್ದಾರಿ ಆಗುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಕೆ.ಎಸ್. ಈಶ್ವರಪ್ಪ

ಹಾಗೆಯೇ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಲೋಪ ಉಂಟಾಗದಂತೆ ಮುನ್ನಚ್ಚರಿಕೆ ವಹಿಸಬೇಕು. ಒಟ್ಟು 84 ಕೇಂದ್ರಗಳಿದ್ದು, ಗ್ರಾಮೀಣ ಭಾಗದಲ್ಲಿ 40 ಹಾಗೂ ನಗರ ಪ್ರದೇಶದಲ್ಲಿ 44 ಕೇಂದ್ರಗಳಿವೆ. ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆ ತರಲು 239 ಬಸ್ ವ್ಯವಸ್ಥೆ ಮಾಡಲಾಗಿದೆ. 189 ರೂಟ್​ಗಳಲ್ಲಿ ಒಟ್ಟು 336 ಪಾಯಿಂಟ್ ಗುರುತಿಸಲಾಗಿದೆ. ವಿದ್ಯಾರ್ಥಿಗಳನ್ನು ಕರೆ ತರಲು ರೂಟ್ ಬಸ್‍ಗಳನ್ನು ಹೊರತುಪಡಿಸಿ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಬೇಕು. ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಿಂದ ಸ್ವಲ್ಪ ದೂರದಲ್ಲಿ ಬಿಸಿಯೂಟ ವ್ಯವಸ್ಥೆ ಮಾಡಬೇಕು.

ವಿದ್ಯಾರ್ಥಿಗಳು ಹಾಲ್ ಟಿಕೆಟ್ ಪಡೆಯಲು ಬರುವ ಸಂದರ್ಭದಲ್ಲಿ 3 ಮಾಸ್ಕ್ ಒದಗಿಸಲು ಸೂಚಿಸಲಾಗಿದೆ. ಸುಗಮವಾಗಿ ಪರೀಕ್ಷೆ ನಡೆಸಲು ಸರ್ಕಾರದ ವತಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾಲಕರು ಸಹ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಸಚಿವರು ಮನವಿ ಮಾಡಿದರು.

ಈ ವೇಳೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಡಿಡಿಪಿಯು ನಾಗರಾಜ ಕಾಗಲಕರ್, ಡಿಡಿಪಿಐ ರಮೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details