ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು ಗದರಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮೇಲೆ ಶಾಲೆಯ ಶಿಕ್ಷಕಿಯನ್ನು ಬೇರೆಡೆ ವರ್ಗಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.
ಇಲ್ಲಿನ ಶಿಕ್ಷಕಿಯೊಬ್ಬರು ಪಾಠ ಮಾಡುವಾಗ ಪಾಠ ಕೇಳದ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಕೇಳುವಂತೆ ತಿಳಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳು ಸರಿಯಾಗಿ ಸ್ಪಂದಿಸದ ಕಾರಣ ಶಿಕ್ಷಕಿ ನೀವು ಇಲ್ಲಿ ಇರುವ ಬದಲು ಪಾಕಿಸ್ತಾನಕ್ಕೆ ಹೋಗಿ ಎಂದು ಗದರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತಿಳಿದ ಮಕ್ಕಳ ಪೋಷಕರು ಶಿಕ್ಷಕಿಯನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.
ಈ ಬಗ್ಗೆ ತಿಳಿದ ಕೂಡಲೇ ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಪಿ ಅವರು ಶಾಲೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಪೋಷಕರು ಹಾಗೂ ವಿದ್ಯಾರ್ಥಿಗಳಿಂದ ಬಿಇಒ ಅವರು ಮಾಹಿತಿ ಪಡೆದುಕೊಂಡಿದ್ದಾರೆ. ಆಗ ಮಕ್ಕಳ ಪೋಷಕರು ಶಿಕ್ಷಕಿಯನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದರು. ಇದಕ್ಕೆ ಬಿಇಒ ಅವರು ನಿನ್ನೆಯೇ ಶಾಲಾ ಶಿಕ್ಷಕಿಯನ್ನು ಶಿವಮೊಗ್ಗದ ಗ್ರಾಮಾಂತರ ಭಾಗಕ್ಕೆ ವರ್ಗಾಯಿಸಿಲಾಗಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ಶಿಕ್ಷಕಿ ಗದರಿದ ಕುರಿತು ಇಲಾಖೆಯಲ್ಲಿ ಸಮಿತಿ ರಚನೆ ಮಾಡಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಈಟಿವಿ ಭಾರತ ಜೊತೆ ದೂರವಾಣಿಯಲ್ಲಿ ಮಾತನಾಡಿದ ಬಿಇಒ ನಾಗರಾಜ್, ಶಾಲೆಯಲ್ಲಿ ನಡೆದ ಘಟನೆಯ ಬಗ್ಗೆ ನನಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಶಾಲೆಗೆ ಭೇಟಿ ನೀಡಿ, ಅಲ್ಲಿನ ವಾಸ್ತವ ಸ್ಥಿತಿ ಪರಿಶೀಲಿಸಿದ್ದೇನೆ. ಶಿಕ್ಷಕಿಯ ಜೊತೆ ಮಾತನಾಡಿದ್ದು, ಅವರ ಹೇಳಿಕೆಯನ್ನು ಪಡೆದುಕೊಂಡಿದ್ದೇನೆ. ಅವರು ಕಳೆದ 9 ವರ್ಷಗಳಿಂದ ಇದೇ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ನಂತರ ವಿದ್ಯಾರ್ಥಿಗಳ ಹಾಗೂ ಪೋಷಕರ ಹೇಳಿಕೆ ಪಡೆದುಕೊಂಡು ಶಿಕ್ಷಕಿಯನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ಈ ಶಾಲೆಗೆ ಬೇರೆ ಶಿಕ್ಷಕಿಯನ್ನು ನೇಮಕ ಮಾಡಲಾಗಿದೆ. ಈ ಘಟನೆ ಕುರಿತು ವಿಚಾರಿಸಲು ನಮ್ಮಲ್ಲಿಯೇ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ :ಅತಿಥಿ ಶಿಕ್ಷಕಿ, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಕಲಬುರಗಿಯಲ್ಲಿ ಪ್ರಭಾರ ಮುಖ್ಯೋಪಾಧ್ಯಾಯ ಪೊಲೀಸ್ ವಶಕ್ಕೆ