ಶಿವಮೊಗ್ಗ: ಮರು ಬಳಕೆ ಮಾಡಲು ಸಾಧ್ಯವಿಲ್ಲದ ಪ್ಲಾಸ್ಟಿಕ್ ಬಳಕೆ ವಿರುದ್ಧ ಮುಂದಿನ 10 ದಿನಗಳ ಕಾಲ ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ಮುಕ್ತ ಸಮಾಜ ಅರಿವು ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಟ್ಟುನಿಟ್ಟಾಗಿ ಸ್ಥಗಿತಗೊಳಿಸಬೇಕು. ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಅಂಗಡಿ ಮುಂಗಟ್ಟುಗಳನ್ನು ಪರಿಶೀಲಿಸಿ ಪ್ಲಾಸ್ಟಿಕ್ ಜಪ್ತಿ ಮಾಡಿ ಕ್ರಮ ಕೈಗೊಳ್ಳಬೇಕು. ಶಾಲಾ ಕಾಲೇಜುಗಳಲ್ಲಿ ಪ್ಲಾಸ್ಟಿಕ್ ಬಗ್ಗೆ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸೂಚಿಸಿದ್ರು.
ಪ್ಲಾಸ್ಟಿಕ್ ಬಳಕೆ ವಿರುದ್ಧ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಅಗತ್ಯವಿದೆ. ಪ್ರತಿಯೊಬ್ಬರೂ ಅಂಗಡಿಗಳಿಗೆ ಹೋಗುವಾಗ ಬಟ್ಟೆ ಚೀಲವನ್ನು ಕೊಂಡೊಯ್ಯುವಂತೆ ಮನವೊಲಿಸಬೇಕು. ಈ ಕುರಿತು ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಮನೆಮನೆಗೆ ಭೇಟಿ, ಜಾಥಾ ಕಾರ್ಯಕ್ರಮ, ಬಟ್ಟೆ ಚೀಲ ವಿತರಣೆ, ಪ್ರತಿಜ್ಞಾ ಸ್ವೀಕಾರ ಇತ್ಯಾದಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದು ಎಂದು ಹೇಳಿದರು.