ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಅವರು ನಿನ್ನೆ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಶರಾವತಿ ಮುಳುಗಡೆಗೆ ಒಳಗಾದ ರೈತರ ಸಮಸ್ಯೆಗಳು, ಶರಾವತಿ ಆಭಯಾರಣ್ಯ, ಅರಣ್ಯ ಕಾಯ್ದೆ ಹಾಗೂ ಸಿ ಮತ್ತು ಡಿ ಭೂಮಿಯ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಸಂಬಂಧ ಉಚ್ಛನ್ಯಾಯಾಲಯ ತಡೆಯಾಜ್ಞೆ ನೀಡಿ ಸೂಚಿಸಿರುವಂತೆ ಅನುಸೂಚಿತ ಮೀಸಲು ಅರಣ್ಯ ಪ್ರದೇಶ ಡಿನೋಟಿಫಿಕೇಷನ್ ನಿರ್ಧಾರ ಕೈಗೊಳ್ಳುವ ಮುನ್ನ ಕೇಂದ್ರ ಸರ್ಕಾರದ ಅನುಮತಿ ಅಗತ್ಯವಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿಗಳು ರಚಿಸಿದ್ದ ಟಾಸ್ಕ್ ಫೋರ್ಸ್ ಕ್ರಿಯಾಶೀಲಗೊಳಿಸಲು ಟಾಸ್ಕ್ ಫೋರ್ಸ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ತಿಳಿಸಿದರು.
ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಹೊಸ ಸಮೀಕ್ಷೆ ನಡೆಸಬೇಕಿದ್ದು, ಈ ಕಾರ್ಯವನ್ನು 3-5 ತಿಂಗಳೊಳಗಾಗಿ ಮುಕ್ತಾಯ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಇದಕ್ಕಾಗಿ ವಿಶೇಷ ಜಿಲ್ಲಾಧಿಕಾರಿ, ಅರಣ್ಯ ವ್ಯವಸ್ಥಾಪನಾಧಿಕಾರಿಗಳನ್ನು ತಕ್ಷಣವೇ ನೇಮಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಅಭಯಾರಣ್ಯ ಗಡಿಗಳನ್ನು ಪುನರ್ ನಿಗದಿಪಡಿಸುವುದು:
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಶಿವಮೊಗ್ಗ ನಗರದ ಪ್ರಮುಖ ಭಾಗಗಳು ಸೇರಿದಂತೆ ಜನವಸತಿ ಹಾಗೂ ಸರ್ಕಾರಿ ಕಟ್ಟಡಗಳಿರುವ ಪ್ರದೇಶಗಳು ಅಭಯಾರಣ್ಯದ ವ್ಯಾಪ್ತಿಗೆ ಬರುತ್ತಿದ್ದು, ಗಡಿ ಪುನರ್ ನಿಗದಿಪಡಿಸುವುದರಿಂದ ಸಮಸ್ಯೆ ಬಗೆಹರಿಸಬಹುದು ಎಂದರು.
ಈ ಬಗ್ಗೆ ಈಗಾಗಲೇ ಕ್ರಮ ಜರುಗಿಸಲಾಗಿದ್ದು, ವನ್ಯಜೀವಿ ಪ್ರದೇಶವನ್ನು ನಿಗದಿಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು. ನಂತರ ಗಡಿ ನಿಗದಿಪಡಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.