ಶಿವಮೊಗ್ಗ :ಈ ಸಾಲಿನ ಹಣಕಾಸು ಆಯೊಗದಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ, ಮಾರ್ಚ್ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿಕಾರಿಪುರ ತಾಲೂಕು ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಲೋಕೋಪಯೋಗಿ ಇಲಾಖೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳನ್ನು ಹೆಚ್ಚು ಬೆಳೆಯಲು ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಪ್ರತಿ ವರ್ಷ ತೋಟಗಾರಿಕಾ ಬೆಳೆಗಳ ಕ್ಷೇತ್ರ ಹೆಚ್ಚಳವಾಗಬೇಕು ಎಂದರು.
ರೈತರು ಮಿಶ್ರ ಬೆಳೆ ಬೆಳೆಯುವುದರಿಂದ ಹೆಚ್ಚಿನ ಆರ್ಥಿಕ ಲಾಭ ಪಡೆಯಲು ಸಾಧ್ಯವಿದೆ. ಒಂದೆರಡು ಎಕರೆ ಜಮೀನಿನಲ್ಲಿ ಮಾವು, ಬಾಳೆ, ಶುಂಠಿ, ತೆಂಗು ಮೊದಲಾದ ಮಿಶ್ರ ಬೆಳೆಗಳನ್ನು ಬೆಳೆದು ಲಕ್ಷಾಂತರ ರೂ. ಲಾಭ ಪಡೆಯಲು ಸಾಧ್ಯವಿದೆ. ಹನಿ ನೀರಾವರಿಗೆ ಹೆಚ್ಚಿನ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಹನಿ ನೀರಾವರಿ ಸೌಲಭ್ಯಕ್ಕಾಗಿ ಬಾಕಿ ಇರುವ ಅರ್ಜಿಗಳ ಮಾಹಿತಿ ಒದಗಿಸಬೇಕು. ಈಗಾಗಲೇ ಹನಿ ನೀರಾವರಿ ಅಳವಡಿಸಿರುವ ರೈತರಿಗೆ ಸಬ್ಸಿಡಿ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.