ಶಿವಮೊಗ್ಗ:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಇಂದು ಭೇಟಿ ನೀಡಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಭೂಮಿಪೂಜೆ ನೆರವೇರಿಸಲಿದ್ದಾರೆ.
ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನಡೆಸಲಿರುವ ಸಿಎಂ ಯಡಿಯೂರಪ್ಪ ಈ ಕುರಿತು ಸಂಸದ ಬಿ.ವೈ. ರಾಘವೇಂದ್ರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿಗಳು ತಮ್ಮ ತವರು ಕ್ಷೇತ್ರವಾದ ಶಿಕಾರಿಪುರದಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು, ಬಳಿಕ ಜನತಾ ದರ್ಶನ ನಡೆಸಿ ಕ್ಷೇತ್ರದ ಜನತೆಯ ಆಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಮಧ್ಯಾಹ್ನ ಶಿಕಾರಿಪುರದಿಂದ ಹೊರಟು ಶಿವಮೊಗ್ಗದಲ್ಲಿರುವ ಹಳೆಯ ಕಾರಾಗೃಹದ ಜಾಗದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಂತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದರು.
ಸಿಮ್ಸ್ ಮೆಡಿಕಲ್ ಕಾಲೇಜು ಆವರಣದಲ್ಲಿ ಕಟ್ಟಡಗಳ ಉಳಿಕೆ ಕಾಮಗಾರಿ ಮತ್ತು ದುರಸ್ತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ ನಿಲಯದ ಕಟ್ಟಡ, ಇಂಟರ್ನ್ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ, ಆಧುನಿಕ ಶವ ಪರೀಕ್ಷಾ ಕಟ್ಟಡಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪೊಲೀಸ್ ವಸತಿ ಗೃಹಗಳ ಉದ್ಘಾಟನೆ ಸಹ ನೆರವೇರಲಿದ್ದು, ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದ ಶಾಂತವೇರಿ ಗೋಪಾಲಗೌಡ ವೃತ್ತದಿಂದ ಎನ್.ಟಿ. ರಸ್ತೆವರೆಗಿನ ಒಳ ವರ್ತುಲ ರಸ್ತೆಯಲ್ಲಿ ಸೈಕಲ್, ಪಾದಚರಿ ಮಾರ್ಗದಲ್ಲಿ ಕೆಲವು ಸೌಲಭ್ಯಗಳಿಗೆ ಚಾಲನೆ ನೀಡಲಿದ್ದಾರೆ. ತುಂಗಾ ನದಿಯ ಉತ್ತರ ದಂಡೆಯಲ್ಲಿ ವಾಯು ವಿಹಾರ ಕಾಮಗಾರಿಗೆ ಚಾಲನೆ ಕೊಡಲಿದ್ದಾರೆ. ಕುಂಸಿಯಲ್ಲಿನ ಮೆಸ್ಕಾಂ ಉಪ ವಿಭಾಗೀಯ ನೂತನ ಕಟ್ಟಡದ ಉದ್ಘಾಟನೆ ಸೇರಿದಂತೆ ಸುಮಾರು 50 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಿಎಂ ಶಿವಮೊಗ್ಗ ಕಾರ್ಯಕ್ರಮ ಮುಗಿಸಿ ಮತ್ತೆ ಶಿಕಾರಿಪುರಕ್ಕೆ ತೆರಳಲಿದ್ದಾರೆ. ಅಕ್ಟೋಬರ್ 1ರಂದು ಶಿವಮೊಗ್ಗ ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ರವರ ಜೊತೆ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.