ಶಿವಮೊಗ್ಗ:ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಕುರಿತಾದ ದೂರುಗಳನ್ನು ತಕ್ಷಣ ಸ್ವೀಕರಿಸಿ, ಕ್ರಮ ಕೈಗೊಳ್ಳುವಂತೆ ಎಲ್ಲಾ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಮಹಿಳೆ ಮತ್ತು ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇವಾ ಸಂಸ್ಥೆಗಳು ನೀಡುವ ದೂರುಗಳ ಸಂದರ್ಭದಲ್ಲಿ ಎಫ್ಐಆರ್ ದಾಖಲಿಸಲು ವಿಳಂಬ ಮಾಡಬಾರದು ಎಂದು ಹೇಳಿದರು.
ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 37 ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಲಭ್ಯವಿರುವ ಮೂಲ ಸೌಕರ್ಯಗಳನ್ನು ಪರಿಶೀಲಿಸಬೇಕು. ಈ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕು ಚ್ಯುತಿಯಾಗುತ್ತಿರುವ ಬಗ್ಗೆ ದೂರುಗಳು ಬಂದರೆ ತಕ್ಷಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ದತ್ತು ಕೇಂದ್ರ ಸ್ಥಾಪಿಸುವ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಸಮಿತಿಯ ಮುಂದಿರಿಸುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಬಾಲ್ಯವಿವಾಹ ತಡೆ:
ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಬಾಲ್ಯ ವಿವಾಹ ತಪ್ಪಿಸಿದ ಬಳಿಕ ಅಂತಹ ಮಕ್ಕಳು ಮತ್ತೆ ಶಾಲೆಗೆ ಹೋಗುವುದನ್ನು ಖಾತ್ರಿಪಡಿಸಿ ನಿರಂತರ ನಿಗಾ ವಹಿಸಬೇಕು. ಬಾಲ್ಯ ವಿವಾಹ ತಡೆ ಕುರಿತು ದೇವಸ್ಥಾನ, ಮಸೀದಿ, ಕಲ್ಯಾಣ ಮಂಟಪ ಇತ್ಯಾದಿ ಕಡೆಗಳಲ್ಲಿ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ 2019ನೇ ಸಾಲಿನಲ್ಲಿ ಬಾಲ್ಯ ವಿವಾಹದ ಬಗ್ಗೆ 75 ದೂರುಗಳನ್ನು ಸ್ವೀಕರಿಸಲಾಗಿದೆ. ಇವುಗಳ ಪೈಕಿ 48 ಬಾಲ್ಯ ವಿವಾಹಗಳನ್ನು ತಪ್ಪಿಸಲಾಗಿದೆ. ಇನ್ನುಳಿದಂತೆ 21ಬಾಲಕಿಯರ ಹಾಗೂ 2 ಬಾಲಕರ ಬಾಲ್ಯ ವಿವಾಹ ನಡೆದಿದ್ದು, ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಮಕ್ಕಳ ಜಿಲ್ಲಾ ರಕ್ಷಣಾಧಿಕಾರಿ ಗಂಗಾಬಾಯಿ ಅವರು ಮಾಹಿತಿ ನೀಡಿದರು.