ಶಿವಮೊಗ್ಗ:ಹಥ್ರಾಸ್ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಕುಟುಂಬಕ್ಕೆ ಶವವನ್ನು ನೀಡದೆ ಪೊಲೀಸರೆ ಸುಟ್ಟು ಹಾಕಿದ ಪ್ರಕರಣ ಖಂಡಿಸಿ ನಗರದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ಉತ್ತರ ಪ್ರದೇಶದಲ್ಲಿ ಹೆಣ್ಣು ಮಕ್ಕಳಿಗೆ, ದಲಿತರಿಗೆ ರಕ್ಷಣೆಯಿಲ್ಲ. ಹೀಗಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವನ್ನು ರಾಷ್ಟ್ರಪತಿಗಳು ವಜಾಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರದ ದಿನಗಳಲ್ಲಿ ಹಾಗೂ ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಮೇಲೆ ಅತ್ಯಾಚಾರ, ಹಾಗೂ ಕೊಲೆಗಳು ನಡೆಯುತ್ತಲೇ ಇವೆ ಎಂದು ಆರೋಪಿಸಿದರು.
ಅತ್ಯಾಚಾರ ಎಸಗಿದ ಕ್ರೂರಿಗಳನ್ನು ಗಲ್ಲಿಗೇರಿಸಬೇಕು ಹಾಗೂ ಅತ್ಯಾಚಾರಗಳನ್ನು ತಡೆಗಟ್ಟುವಲ್ಲಿ ವಿಫಲವಾಗಿರುವ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.