ಕರ್ನಾಟಕ

karnataka

ETV Bharat / state

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ಕರೆ ತರಲು ಡಿಸಿ ಸೂಚನೆ - ಶಿವಮೊಗ್ಗದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಸಭೆ ನಡೆಸಿದರು..

DC KB Shivakumar conducted a progress review meeting at Shimoga
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ಕರೆ ತರಲು ಜಿಲ್ಲಾಧಿಕಾರಿ ಸೂಚನೆ

By

Published : Nov 4, 2020, 1:36 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮತ್ತೆ ಶಾಲೆಗೆ ಕರೆ ತರಲು ವ್ಯವಸ್ಥಿತವಾದ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ 22 ಮಕ್ಕಳು ಶಾಲೆಯಿಂದ ಹೊರಗುಳಿದಿರುವುದನ್ನು ಗುರುತಿಸಲಾಗಿದೆ. ಇವರ ಪೈಕಿ 9 ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಲಾಗಿದ್ದು, ಇನ್ನುಳಿದ ಮಕ್ಕಳನ್ನು ಶಾಲೆಗೆ ಸೇರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ 2ನೇ ತರಗತಿಯಿಂದ 10ನೇ ತರಗತಿವರೆಗೆ ಒಟ್ಟು 44,994 ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಒಟ್ಟು 219 ಉರ್ದು ಶಾಲೆಗಳಿದ್ದು, 44,933 ವಿದ್ಯಾರ್ಥಿಗಳು ಓದುತ್ತಿದ್ದಾರೆ. 610 ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ್ ಅವರು ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ತಿಂಗಳಲ್ಲಿ 25 ದಿನ ಮಧ್ಯಾಹ್ನದ ಪೌಷ್ಟಿಕ ಆಹಾರ, ಮೊಟ್ಟೆ ಹಾಲು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 2,052 ಗರ್ಭಿಣಿಯರು ಮತ್ತು 1,904 ಬಾಣಂತಿಯರು ಮತ್ತು 5 ಮಂದಿ ಕಿಶೋರಿಯರು, 6 ವರ್ಷದೊಳಗಿನ 19,311 ಮಕ್ಕಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಉಪ ನಿರ್ದೇಶಕರು ತಿಳಿಸಿದರು.

ಕೇಂದ್ರ ಸರ್ಕಾರದಿಂದ ಮೌಲಾನಾ ಆಜಾದ್ ಫೌಂಡೇಶನ್​​​​​ನಿಂದ 9 ರಿಂದ 12ನೇ ತರಗತಿಯ ವಿದ್ಯಾರ್ಥಿನಿಯರಿಗೆ, ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. 8-10ನೇ ತರಗತಿ ವಿದ್ಯಾರ್ಥಿನಿಯರಿಗೆ 5 ಸಾವಿರ ರೂ. ಮತ್ತು 11-12ನೇ ತರಗತಿ ವಿದ್ಯಾರ್ಥಿನಿಯರಿಗೆ 6 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.

ಈ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ಯೋಜನೆಯಡಿ ಗ್ರಾಂಟ್ ಇನ್ ಏಯ್ಡ್, ಸೀಕೋ ಔರ್ ಕಮಾಯೋ ಯೋಜನೆಯಡಿ ವೃತ್ತಿ ಕೌಶಲ್ಯ ತರಬೇತಿ ನೀಡಲಾಗುತ್ತಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಧರ್ಮಪ್ಪ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

For All Latest Updates

TAGGED:

ABOUT THE AUTHOR

...view details