ಶಿವಮೊಗ್ಗ:ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕಾತಿಯನ್ನು ಗೌರವಯುತವಾಗಿ ಮಾಡಲು ಪ್ರಸ್ತುತ ಇರುವ ನೇಮಕಾತಿ ಪ್ರಕ್ರಿಯೆಯನ್ನು ಬದಲಾಯಿಸಿ ತಜ್ಞರ ನೇಮಕಾತಿ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎಸ್.ಅಶ್ವಥ್ ನಾರಾಯಣ್ ತಿಳಿಸಿದರು.
ಕುವೆಂಪು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾಲಯದ ಎಲ್ಲಾ ಪ್ರಕ್ರಿಯೆಗಳನ್ನು ಪಾರದರ್ಶಕಗೊಳಿಸುವ ಉದ್ದೇಶದಿಂದ, ಕಳೆದ ಸರ್ಕಾರ ವಿಧಾನ ಮಂಡಲದಲ್ಲಿ ಮಂಡಿಸಿದ್ದ ಕಾಯ್ದೆಯನ್ನು ಹಿಂದಕ್ಕೆ ಪಡೆದುಕೊಂಡು, ಹೊಸದಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಯ್ದೆಯನ್ನು ಮಂಡಿಸಿ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಕುಲಪತಿಗಳ ನೇಮಕಾತಿಗೆ ಪ್ರತಿ ವಿಶ್ವವಿದ್ಯಾಲಯಗಳಲ್ಲಿ ಪರಿಶೀಲನಾ ಸಮಿತಿಯನ್ನು ರಚಿಸುವ ವ್ಯವಸ್ಥೆಯಿದೆ. ನೇಮಕಾತಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸುವ ಉದ್ದೇಶದಿಂದ ಇನ್ನು ಮುಂದೆ ನೇಮಕಾತಿಗೆ ಸಮಿತಿಯನ್ನು ರಚಿಸಲಾಗುವುದು. ಜೇಷ್ಠತೆಯ ಆಧಾರದಲ್ಲಿ ಕುಲಪತಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಎಲ್ಲಾ ವಿಶ್ವವಿದ್ಯಾಲಯಗಳ ಆಡಳಿತ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸಿ, ವಿದ್ಯಾರ್ಥಿ ಸ್ನೇಹಿ ವಾತಾವರಣ ನಿರ್ಮಿಸುವ ಉದ್ದೇಶದಿಂದ, ಎಲ್ಲಾ ವಿಶ್ವವಿದ್ಯಾಲಯಗಳನ್ನು ಒಂದೇ ವೇದಿಕೆಯಡಿ ತರಲು ಇ-ಗವರ್ನೆನ್ಸ್ ಪ್ಲಾಟ್‍ಫಾರ್ಮ್ ಸಿದ್ಧಪಡಿಸಲಾಗುವುದು. ಇದರಿಂದ ಎಲ್ಲಾ ವಿಶ್ವವಿದ್ಯಾಲಯಗಳ ಆಡಳಿತ ಪ್ರಕ್ರಿಯೆ ಸುಲಲಿತವಾಗಿ ಮತ್ತು ಪಾರದರ್ಶಕವಾಗಿ ನಡೆಯಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಎಲ್ಲಾ ಕುಲಪತಿಗಳೊಂದಿಗೆ ಹಲವು ಸುತ್ತಿನ ಚರ್ಚೆಗಳನ್ನು ನಡೆಸಲಾಗಿದೆ ಎಂದರು.