ಶಿವಮೊಗ್ಗ: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ನೆಹರೂ ಕ್ರೀಡಾಂಗಣದ ಪ್ರಥಮ ಹಂತದ ಅಭಿವೃದ್ಧಿ ಕಾಮಗಾರಿಗಳನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಈ ಸೂಚನೆ ನೀಡಿದರು.ಮೊದಲ ಹಂತದಲ್ಲಿ 2.30ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ವಾಲಿಬಾಲ್ ಕೋರ್ಟ್ ನಿರ್ಮಾಣ, ಫೈಬರ್ ಚಾವಣಿ ಅಳವಡಿಕೆ, ಒಳಚರಂಡಿ ಅಭಿವೃದ್ಧಿ, ಇಂಟರ್ ಲಾಕ್‍ಗಳ ಅಳವಡಿಕೆ, ಮಣ್ಣಿನ ಸವಕಳಿ ತಡೆಯಲು ತಡೆಗೋಡೆ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಸುಮಾರು 4 ಮೀಟರ್ ಅಗಲದ ಜಾಗಿಂಗ್ ಟ್ರ್ಯಾಕ್ ನಿರ್ಮಾಣ ಮತ್ತು ಫ್ಲಡ್‍ಲೈಟ್‍ಗಳ ಅಳವಡಿಕೆ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಕಾಮಗಾರಿ ಅನುಷ್ಟಾನದಲ್ಲಿ ಈಗಾಗಲೇ ವಿಳಂಬವಾಗಿದೆ ಎಂದು ಅವರು ಹೇಳಿದರು.
ಎರಡನೇ ಹಂತದಲ್ಲಿ 30 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಯೋಜನೆಗಳಿಗೆ ಈಗಾಗಲೇ ಅನುಮೋದನೆ ದೊರೆತಿದ್ದು, ಒಂದು ತಿಂಗಳ ಒಳಗಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಆದಷ್ಟು ಬೇಗನೆ ಕಾಮಗಾರಿ ಆರಂಭಿಸಬೇಕು. ಎರಡನೇ ಹಂತದಲ್ಲಿ ಪ್ರಸ್ತುತ ಇರುವ ಹಾಕಿ ಕೋರ್ಟ್, ಹ್ಯಾಂಡ್‍ಬಾಲ್ ಮತ್ತು ಬಾಸ್ಕೆಟ್‍ಬಾಲ್ ಕೋರ್ಟ್‍ಗಳನ್ನು ಅಂತಾರಾಷ್ಟ್ರೀಯ ದರ್ಜೆಗೇರಿಸಲು ಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದರು.
ಸಮರ್ಪಕ ನಿರ್ವಹಣೆ ಕ್ರಮ: ಪ್ರಸ್ತುತ ಇರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಬೇಕು. ಕ್ರೀಡಾಕೂಟಗಳ ಸಂಘಟಕರಿಂದ ಭದ್ರತಾ ಠೇವಣಿಯನ್ನು ಪಡೆದುಕೊಳ್ಳಬೇಕು. ಕ್ರೀಡಾಂಗಣದ ಯಾವುದೇ ಸೌಲಭ್ಯಗಳಿಗೆ ಧಕ್ಕೆ ಉಂಟಾದರೆ ಇದರಿಂದ ಪಡೆದುಕೊಳ್ಳಬೇಕು. ಪ್ರಸ್ತುತ ಇರುವ ಸಿಂಥೆಟಿಕ್ ಟ್ರ್ಯಾಕ್ ಮೇಲೆ ವಾಕಿಂಗ್ ಮಾಡಲು ಅವಕಾಶ ನೀಡಬಾರದು. ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಉಲ್ಲಂಘಿಸುವವರಿಗೆ ದಂಡ ವಿಧಿಸಬೇಕು ಎಂದು ಅವರು ಸೂಚನೆ ನೀಡಿದರು.
ಒಳಾಂಗಣ ಕ್ರೀಡಾಂಗಣ ಅಭಿವೃದ್ಧಿ: ನೆಹರೂ ಕ್ರೀಡಾಂಗಣದ ಹಿಂಬದಿಯಲ್ಲಿರುವ ಒಳಾಂಗಣ ಕ್ರೀಡಾಂಗಣ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಇಲ್ಲಿ ಸದಸ್ಯತ್ವ ಪಡೆಯುವವರಿಗೆ ಗುರುತಿನ ಚೀಟಿಯನ್ನು ನೀಡಬೇಕು. ಕ್ರೀಡಾಕೂಟ ಆಯೋಜಿಸುವವರಿಂದ ಭದ್ರತಾ ಠೇವಣಿ ಪಡೆಯಬೇಕು. ಎಲ್ಲ ಬಾಡಿಗೆಗಳನ್ನು ಆನ್‍ಲೈನ್ ಮೂಲಕ ಮಾತ್ರ ಪಡೆದುಕೊಳ್ಳಬೇಕು. ಈಗಾಗಲೇ ಒಳಾಂಗಣ ಕ್ರೀಡಾಂಗಣ ಮತ್ತು ಈಜುಕೊಳದ ಬಳಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ನೆಹರೂ ಕ್ರೀಡಾಂಗಣದ ಹೊರಭಾಗದಲ್ಲಿ ಸಹ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಅವರು ಆ ಬಳಿಕ ನಡೆದ ಜಿಲ್ಲಾ ಕ್ರೀಡಾಂಗಣದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ, ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.