ಶಿವಮೊಗ್ಗ: ಅರಣ್ಯ ಹಕ್ಕು ಕಾಯ್ದೆಯಡಿ ಬಾಕಿ ಉಳಿದಿರುವ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು ಹಾಗೂ ತಿರಸ್ಕೃತಗೊಂಡ ಅರ್ಜಿಗಳನ್ನು ಮರುಪರಿಶೀಲಸಿ ಸಂಬಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು. ಲೋಕಾಯುಕ್ತ ನ್ಯಾಯಾಲಯದಲ್ಲಿ ದಾಖಲಾಗಿರುವ ಅರಣ್ಯ ಹಕ್ಕು ಕಾಯ್ದೆಯ ಮೂಲ ಕಡತಗಳನ್ನು ಉಪವಿಭಾಗ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಸೂಚಿಸಿದರು.
ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವ ಅಧಿನಿಯಮಗಳಡಿ ಸ್ವೀಕೃತವಾದ ಅರ್ಜಿಗಳನ್ನು ಸಂಬಂಧಿಸಿದ ಡಿಎಫ್‌ಓಗಳು ಮತ್ತು ಉಪವಿಭಾಗಾಧಿಕಾರಿಗಳು ನಿಯಮಿತವಾಗಿ ವಿಲೇವಾರಿ ಮಾಡಬೇಕು. ಫೆಬ್ರವರಿ ಮತ್ತು ಮಾರ್ಚ್ ಮಾಹೆಯಲ್ಲಿ ಗ್ರಾಮ ಅರಣ್ಯ ಹಕ್ಕು ಸಮಿತಿ ಹಾಗೂ ಉಪವಿಭಾಗ ಮಟ್ಟದ ಅರಣ್ಯ ಹಕ್ಕು ಸಮಿತಿಗಳಲ್ಲಿ ಸಾಕಷ್ಟು ಅರ್ಜಿಗಳು ಬಾಕಿ ಇದ್ದು, ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕೆಂದು ಸೂಚನೆ ನೀಡಿದರು.
ವಿಳಂಬಕ್ಕೆ ಕಾರಣ ತಿಳಿಸುವಂತೆ ನೋಟೀಸ್: ಲೋಕಾಯುಕ್ತ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊರಬ ತಾಲೂಕು ತಾಳಗುಪ್ಪ ಗ್ರಾಮದ ಸರ್ವೇ ನಂ 93 ರಲ್ಲಿ 12 ಅರ್ಜಿದಾರರು ಹಾಗೂ ಕಾಟೂರು ಗ್ರಾಮದ ಸರ್ವೇ ನಂ19 ರಲ್ಲಿ 70 ಅರ್ಜಿದಾರರ ಅರ್ಜಿಗಳನ್ನು ವಿಲೇವಾರಿ ಮಾಡುವಲ್ಲಿನ ವಿಳಂಬದ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಿದರು.