ಶಿವಮೊಗ್ಗ:ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ದುರಾಡಳಿತದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಮೇ 10ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು.
ನಗರದಲ್ಲಿ ಭಾನುವಾರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಅಂದು ನಗರದ ಖಾಸಗಿ ಬಸ್ ನಿಲ್ದಾಣದಿಂದ ಕೋರ್ಟ್ ಸರ್ಕಲ್ವರೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ 20 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.
ರಾಜ್ಯದಲ್ಲಿ ಸಂಪೂರ್ಣ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಧರ್ಮ-ಧರ್ಮಗಳ ನಡುವೆ ಜಾತಿ ಭೇದ-ಭಾವಗಳನ್ನು ತಂದು ಅಶಾಂತಿ ಸೃಷ್ಟಿಸುವ ಕೆಲಸವನ್ನು ಬಿಜೆಪಿಗರು ಮಾಡುತ್ತಿದ್ದಾರೆ. ಇಂದು ಜನರು ಜೀವನ ನಡೆಸುವುದು ದುಸ್ತರವಾಗಿದೆ. ಪ್ರಧಾನಿಯಿಂದ ಹಿಡಿದು ಗ್ರಾಮ ಪಂಚಾಯಿತಿ ಸದಸ್ಯನವರೆಗೆ ಬಿಜೆಪಿಯ ನಾಯಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಇವೆಲ್ಲವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೆ ತಂದರೆ ಜನರಿಗೆ ಅನುಕೂಲವಾಗುವಂತೆ ಮಾಡಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಜನವಿರೋಧಿ ಕಾಯ್ದೆಗಳು, ಜನವಿರೋಧಿ ಕಾನೂನುಗಳನ್ನು ತಂದು ಜನರ ಬದುಕನ್ನು ದುಸ್ತರ ಮಾಡಿದೆ. ಇಂದು ದಿನಬಳಕೆ ವಸ್ತುಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಸೇರಿದಂತೆ ಎಲ್ಲವೂ ಗಗನಕ್ಕೇರಿವೆ. ಹೀಗಾಗಿ ಜನರು ಸಹ ಬದಲಾವಣೆ ಬಯಸುತ್ತಿದ್ದಾರೆ ಎಂದರು.
ಇದನ್ನೂ ಓದಿ:ಸಿಡಿ ಇಟ್ಕೊಂಡೇ ನಮ್ಮ ಬಿಜೆಪಿಯೊಳಗೆ ಮಂತ್ರಿ ಆಗ್ಯಾರ, ₹50-100 ಕೋಟಿ ಎಲ್ಲಿಂದ ಕೋಡೋದು?: ಯತ್ನಾಳ್