ಶಿವಮೊಗ್ಗ:ಪಿಡಿಒಗಳಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣದ ಇಒ ಬೈರಪ್ಪರನ್ನು ಅಮಾನತು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಒ ಬೈರಪ್ಪ ಪಿಡಿಒಗಳಿಗೆ ತೊಂದರೆ ಕೊಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಮುಂದೆ ತನಿಖೆ ಮಾಡಿ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳಲಾಗುತ್ತದೆ ಎಂದರು.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಇಡೀ ರಾಜ್ಯದ ಇಒಗಳು ಪಿಡಿಒಗಳ ಜೊತೆ ಒಳ್ಳೆಯ ಸಂಬಂಧ ಇಟ್ಟುಕೊಂಡು, ಜನ ಸಾಮಾನ್ಯರಿಗೆ ಬೇಕಾದಂತಹ ಎಲ್ಲಾ ಕೆಲಸಗಳನ್ನು ಮಾಡಿಕೊಡುವ ನಿಟ್ಟಿನಲ್ಲಿ ನಿಮ್ಮ ಕರ್ತವ್ಯ ನಿರ್ವಹಿಸಬೇಕು. ಯಾರು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲವೋ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ:ಶಾಲೆಯಲ್ಲಿ ಹಿಜಾಬ್, ಕೇಸರಿ ಶಾಲಿಗೆ ಇಲ್ಲ ಅವಕಾಶ: ಗೃಹ ಸಚಿವ ಆರಗ ಜ್ಞಾನೇಂದ್ರ
ಶಾಲಾ-ಕಾಲೇಜುಗಳಲ್ಲಿ ಉಂಟಾಗಿರುವ ಹಿಜಾಬ್ ವಿವಾದ ವಿಚಾರವಾಗಿ ಉಂಟಾಗಿರುವ ಗೊಂದಲದ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಶಾಲಾ ಕಾಲೇಜು ಆಡಳಿತ ಮಂಡಳಿಗಳು ಗಮನ ನೀಡಬೇಕು. ಇಡೀ ರಾಜ್ಯದಲ್ಲಿ ಹಿಂದೂ-ಮುಸ್ಲಿಮರು ಅಣ್ಣ-ತಮ್ಮಂದಿರಂತೆ ಬಾಳುತ್ತಿದ್ದಾರೆ. ಈ ಸಂದರ್ಭದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಸಲಾಗುತ್ತಿದೆ. ಹೀಗಾಗಿ ಹಿಜಾಬ್ ವ್ಯವಸ್ಥೆ ಬಗ್ಗೆ ಶಾಲಾ ಆಡಳಿತ ಮಂಡಳಿಗಳು ಗಮನಹರಿಸಿ ತೊಂದರೆ ಆಗದ ರೀತಿಯಲ್ಲಿ ಸಂಬಂಧಪಟ್ಟ ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹೇಳುತ್ತೇನೆ. ಇದರ ಜೊತೆಗೆ ಸರ್ಕಾರ ಗಮನಹರಿಸುವ ಮುಂಚೆ ಆಯಾ ಶಾಲಾ ಕಾಲೇಜು ಮಂಡಳಿಯವರು ಗಮನ ಹರಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.