ಬೆಂಗಳೂರು :ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ಗುರುವಾರ ಹೇಳಿದ್ದಾರೆ. ರಾಜ್ಯದ ಹೊಸ ವಿಮಾನ ನಿಲ್ದಾಣಗಳ ಕಾಮಗಾರಿ ಪ್ರಗತಿ ಮತ್ತಿತರ ವಿಷಯಗಳ ಬಗ್ಗೆ ಅಧಿಕಾರಿಗಳ ಜೊತೆ ವಿಧಾನಸೌಧದಲ್ಲಿ ಇಂದು ಸಭೆ ನಡೆಸಿದ ಸಚಿವರು, ರಾಜ್ಯ ಸರ್ಕಾರದಿಂದ ಕಾರ್ಯಾಚರಣೆ ಮತ್ತು ನಿರ್ವಹಣೆಗೊಳ್ಳಲಿರುವ ಮೊದಲ ಏರ್ಪೋರ್ಟ್ ಇದಾಗಲಿದೆ ಎಂದರು.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆ್ಯಂಬುಲೆನ್ಸ್ ಮತ್ತು ಇತರ ಅಗತ್ಯ ವಾಹನಗಳನ್ನು ನಿಯೋಜಿಸುವ ಕೆಲಸ ಆಗಬೇಕಾಗಿದೆ. ಕಾಫಿ ಕೆಫೆ ಆರಂಭಿಸುವ ಸಂಬಂಧದ ಕೆಲಸವೂ ಆಗಬೇಕಿದೆ. ಜೊತೆಗೆ, ಕೆಲವು ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿ ನೇಮಕ ನಡೆಯಬೇಕಿದೆ. ಇವೆಲ್ಲವನ್ನೂ ಜುಲೈ 20ರ ಹೊತ್ತಿಗೆ ಪೂರೈಸಿ ವಿಮಾನ ನಿಲ್ದಾಣವನ್ನು ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗುವುದು ಎಂದು ವಿವರಿಸಿದರು.
ಕೇಂದ್ರ ನಾಗರಿಕ ವಿಮಾನ ನಿರ್ದೇಶನಾಲಯವು ಇಲ್ಲಿನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಎಸ್ಐಐಡಿಸಿ) ವಹಿಸಿದೆ. ಇದರೊಂದಿಗೆ ಶಿವಮೊಗ್ಗ ನಿಲ್ದಾಣವು ರಾಜ್ಯ ಸರ್ಕಾರದ ಸಂಸ್ಥೆಯ ವತಿಯಿಂದ ನಡೆಯಲಿರುವ ಕರ್ನಾಟಕದ ಮೊದಲನೇ ವಿಮಾನ ನಿಲ್ದಾಣವಾಗಲಿದೆ. ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಶಿವಮೊಗ್ಗ ಏರ್ಪೋರ್ಟ್ನಲ್ಲಿ 20 ವಿಮಾನಗಳು ಬಂದಿಳಿದಿವೆ. ಇದರಿಂದಾಗಿ 12 ಲಕ್ಷ ರೂ. ಆದಾಯ ಬಂದಿದೆ ಎಂದರು.
ಆಗಸ್ಟ್ 11ರಂದು ನಿಲ್ದಾಣ ಕಾರ್ಯಾರಂಭಗೊಳಲಿದ್ದು, ಅಂದು ಮೊದಲ ವಿಮಾನ ಹಾರಾಟ ನಡೆಸಲಿದೆ. ಈ ಐತಿಹಾಸಿಕ ಸನ್ನಿವೇಶಕ್ಕೆ ಸಾಕ್ಷಿಯಾಗಲು ಜಿಲ್ಲೆಯ ರಾಜಕೀಯ ಮುಖಂಡರು ಮತ್ತು ಜನಪ್ರತಿನಿಧಿಗಳೂ ಪಾಲ್ಗೊಳ್ಳಲಿದ್ದಾರೆ. ಎಲ್ಲಾ ಯೋಜನೆಯಂತೆ ನಡೆದರೆ ಆಗಸ್ಟ್ 11ರಂದು ಬೆಂಗಳೂರಿನಿಂದ ಹೊರಡುವ ವಿಮಾನವು ಶಿವಮೊಗ್ಗ ನಿಲ್ದಾಣದಲ್ಲಿ ಇಳಿಯಲಿದೆ ಎಂದು ಎಂಬಿ ಪಾಟೀಲ ಹೇಳಿದರು.