ಶಿವಮೊಗ್ಗ : ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನ ವಿರೋಧಿ, ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಸಮಿತಿ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.
ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಜನ ವಿರೋಧಿ, ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು. ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಕಾನೂನನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಇದೇ ತಿಂಗಳ ಜ.20ರಂದು ಫ್ರೀಡಂ ಪಾರ್ಕ್ನಿಂದ ರಾಜಭವನಕ್ಕೆ ತೆರಳಿ ರಾಜ್ಯ ಕಾಂಗ್ರೆಸ್ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಹಾಗಾಗಿ ಜಿಲ್ಲೆಯ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿಕೊಂಡರು.
ಸರ್ಕಾರ ಅದಾನಿ, ಅಂಬಾನಿಗೆ ಸಹಾಯ:
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಕಾರ್ಪೋರೇಟ್ ಕಂಪನಿಗಳಿಗೆ ಹಾಗೂ ಅದಾನಿ, ಅಂಬಾನಿಗಳಿಗೆ ಸಹಾಯ ಮಾಡುತ್ತಿದ್ದಾರೆ. ಕೇಂದ್ರದಿಂದ ಜಿಎಸ್ಟಿ ತೆರಿಗೆ ಹಣವು ರಾಜ್ಯಕ್ಕೆ ಬಂದಿಲ್ಲ. ರಾಜ್ಯದ ಪಾಲನ್ನು ತರುವಲ್ಲಿ ಸಂಸದರು ವಿಫಲರಾಗಿದ್ದಾರೆ. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಶಾಸಕರಿಗೆ ನೀಡಬೇಕಾದ ಅನುದಾನ ನೀಡುತ್ತಿಲ್ಲ. ಅಲ್ಲದೆ ಸಿದ್ದರಾಮಯ್ಯ ಸರ್ಕಾರದಲ್ಲಿ ನೀಡಿರುವ ಅನುದಾನಗಳನ್ನೆ ಹಿಂಪಡೆಯಲಾಗುತ್ತಿದೆ. ಹಾಗಾಗಿ ಮುಖ್ಯಮಂತ್ರಿಗಳು ಶ್ವೇತಪತ್ರ ಹೊರಡಿಸುವ ಮೂಲಕ ರಾಜ್ಯದ ಆರ್ಥಿಕ ಪರಿಸ್ಥಿತಿ ಹೇಗಿದೆ ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಸವಾಲ್ ಹಾಕಿದ ಪರಮೇಶ್ವರ್:
ಬಿಜೆಪಿಯವರು ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದು ನಾವೇ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಗೋ ಮಾಂಸ ರಫ್ತಿನಲ್ಲಿ ಪ್ರಪಂಚದಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶದಲ್ಲಿ ಅನೇಕ ಗೋ ಮಾಂಸ ಕಂಪನಿಗಳು ಬಿಜೆಪಿ ಮುಖಂಡರದ್ದೆ ಇವೆ. ಹಾಗಾಗಿ ಇವರಿಗೆ ತಾಕತ್ತಿದ್ದರೆ ಗೋ ಮಾಂಸ ರಫ್ತನ್ನು ಸಂಪೂರ್ಣವಾಗಿ ನಿಲ್ಲಿಸಿ ತೋರಿಸಲಿ ಎಂದು ಸವಾಲ್ ಹಾಕಿದರು.
ಕಚ್ಚಾ ತೈಲ ಬೆಲೆ ಕಡಿಮೆ ಇದ್ದರೂ ಸಹ ಶೇಕಡಾ 69ರಷ್ಟು ತೆರಿಗೆ ವಿಧಿಸುವ ಮೂಲಕ ಪೆಟ್ರೋಲ್, ಡಿಸೇಲ್ ಏರಿಕೆ ಮಾಡಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ಕೂಡಲೆ ತೆರಿಗೆಗಳನ್ನು ಕಡಿಮೆ ಮಾಡಿ ಜನ ಸಾಮಾನ್ಯರಿಗೆ ಕಡಿಮೆ ದರದಲ್ಲಿ ಪೆಟ್ರೋಲ್, ಡಿಸೇಲ್ ಸಿಗುವಂತೆ ಮಾಡಬೇಕೆಂದು ಆಗ್ರಹಿಸಿದರು.