ಶಿವಮೊಗ್ಗ: ಅಕ್ಟೋಬರ್ 4 ರಂದು ನಗರದ 21 ಪರೀಕ್ಷಾ ಕೇಂದ್ರಗಳಲ್ಲಿ ಸರ್ಕಾರಿ ಪ್ರಾಥಮಿಕ ಶಿಕ್ಷಕರ ಅರ್ಹತಾ ಪರೀಕ್ಷೆಗಳು ನಡೆಯಲಿರುವುದರಿಂದ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ತಿಳಿಸಿದ್ದಾರೆ.
ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 9.30ರಿಂದ 12ರವರೆಗೆ ನಡೆಯುವ ಮೊದಲ ಪರೀಕ್ಷೆಯಲ್ಲಿ 2198 ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ 2 ರಿಂದ 4.30ರವರೆಗೆ ನಡೆಯುವ ದ್ವಿತೀಯ ಪರೀಕ್ಷೆಯಲ್ಲಿ 5696 ಅಭ್ಯರ್ಥಿಗಳು ಸೇರಿದಂತೆ ಒಟ್ಟು 7894 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.
ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಪರೀಕ್ಷಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲು ಉದ್ದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳು ಜನಸಂದಣಿಯಿಂದ ಕೂಡಿರದಂತೆ ನೋಡಿಕೊಳ್ಳಲು ಅಗತ್ಯ ಪೊಲೀಸ್ ಸಿಬ್ಬಂಧಿಯನ್ನು ನಿಯೋಜಿಸಲಾಗುವುದು ಎಂದ ಅವರು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೊರೊನಾದಂತಹ ಗುಣಲಕ್ಷಣಗಳು ಕಂಡುಬಂದಲ್ಲಿ ಅಥವಾ ಕಂಟೋನ್ಮೆಂಟ್ ವಲಯದಿಂದ ಬರುವ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿಯನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.