ಶಿವಮೊಗ್ಗ:ಮಲೆನಾಡ ಹೆಬ್ಬಾಗಿಲು ಶಿವಮೊಗ್ಗವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡಲು ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಬುಧವಾರ ನಗರದ ಎನ್ಇಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.
ವಿಮಾನ ನಿಲ್ದಾಣಕ್ಕೆ ಈಗಾಗಲೇ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನಿಡಲು ಸಚಿವ ಸಂಪುಟ ನಿರ್ಧರಿಸಿದ್ದು, ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಲ್ಲದೆ, ಶಿವಮೊಗ್ಗ ಬೆಂಗಳೂರಿನ ನಂತರ ರಾಜ್ಯದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಹಾಗೂ ಅಭಿವೃದ್ಧಿಯಾಗುತ್ತಿರುವ ಭವಿಷ್ಯದ ನಗರ ಎಂದು ತಿಳಿಸಿದರು.
ವಿಮಾನ ನಿಲ್ದಾಣದಿಂದ ಜಿಲ್ಲೆಯ ಅಭಿವೃದ್ಧಿ:2006 ರ ಹಿಂದಿನ ಶಿವಮೊಗ್ಗ ಹಾಗೂ ಇಂದಿನ ಶಿವಮೊಗ್ಗದಲ್ಲಿ ಅಜಗಜಾಂತರ ವ್ಯತ್ಯಾಸವಿದ್ದು, ಜಿಲ್ಲೆಯಲ್ಲಿ ಸರ್ವತೋಮುಖ ಅಭಿವೃದ್ದಿಯನ್ನು ನಾವು ಕಾಣುತ್ತಿದ್ದೇವೆ. ಇಂದು ಸುಮಾರು 1000 ಕೋಟಿಗೂ ಅಧಿಕ ವೆಚ್ಚದ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ವಸತಿ ಯೋಜನೆಗಳಡಿ ಮನೆಗಳನ್ನು ನೀಡುವುದು, ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ, ಶಿಕ್ಷಣ, ರಸ್ತೆ, ನೀರು, ನಗರಾಭಿವೃದ್ಧಿ, ತಂತ್ರಜ್ಞಾನ ಹೀಗೆ ಹತ್ತು ಹಲವು ಪುಣ್ಯದ ಕೆಲಸಗಳು ಜನೋಪಯೋಗಿ ನಾಯಕರಿಂದ ಸಾಧ್ಯವಾಗಿದೆ. ಕೇವಲ 18 ತಿಂಗಳ ಅವಧಿಯಲ್ಲಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ವಿಮಾನ ನಿಲ್ದಾಣದಿಂದಾಗಿ ಈ ಭಾಗದಲ್ಲಿ ಶೈಕ್ಷಣಿಕ, ಔದ್ಯೋಗಿಕ, ಆರ್ಥಿಕ, ಪ್ರವಾಸೋದ್ಯಮ ಸೇರಿದಂತೆ ಎಲ್ಲ ವಲಯದಲ್ಲಿ ಜಿಲ್ಲೆಯು ಅಭಿವೃದ್ಧಿ ಹೊಂದಲಿದೆ ಎಂದರು.
ಶರಾವತಿ ನಿರಾಶ್ರಿತರಿಗೆ ಶಾಶ್ವತ ಪರಿಹಾರ:ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿಗೆ ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲಾಗಿದ್ದು ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಅನುಮತಿ ಪಡೆದ ಬಳಿಕ ನಿರಾಶ್ರಿತರಿಗೆ ಶಾಶ್ವತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆಗೆ ಕೇಂದ್ರ ಸರ್ಕಾರ ರೂ. 500 ಕೋಟಿ ಮಂಜೂರು ಮಾಡಿದೆ ಅದರ ಶಂಕುಸ್ಥಾಪನೆ, ಮಿಲೆಟ್ ಉತ್ಸವವನ್ನು ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದಾರೆ. ಇದರಿಂದ ಜಿಲ್ಲೆಯ ಶೈಕ್ಷಣಿಕ, ಔದ್ಯೋಗಿಕ, ಪ್ರವಾಸೋದ್ಯಮ, ಕ್ಷೇತ್ರದಲ್ಲಿ ಅಮೂಲಾಗ್ರ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಅಭಿವೃದ್ಧಿ ನಿರಂತರ ಪ್ರಕ್ರಿಯೆ:ಅಭಿವೃದ್ಧಿ ನಿರಂತರ ಪ್ರಕ್ರಿಯೆಯಾಗಿದೆ. 7 ಸ್ಲಂಗಳಲ್ಲಿ ಜನರಿಗೆ ಹಕ್ಕುಪತ್ರಗಳನ್ನು ನೀಡಲಾಗಿದೆ. ಸುಮಾರು 3000 ಬಡವರ ಮನೆಗೆ ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಹಕ್ಕುಪತ್ರ ನೀಡಲಾಗುತ್ತಿದೆ. ಸಮುದಾಯಭವನಗಳ ನಿರ್ಮಾಣಕ್ಕೆ ಸಹಾಯ, ಒಳಚರಂಡಿ ಹಾಗೂ ಕುಡಿಯುವ ನೀರಿನ ಯೋಜನೆ, ಮಕ್ಕಳ ಶಿಕ್ಷಣ, ಕೊಠಡಿಗಳ ನಿರ್ಮಾಣಗಳನ್ನು ಮಾಡಲಾಗಿದೆ. ನಾಯಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಕೆ.ಎಸ್. ಈಶ್ವರಪ್ಪ ಅವರು ಜನೋಪಯೋಗಿ ನಾಯಕರಾಗಿದ್ದಾರೆ ಎಂದರು. ಬಿ.ಎಸ್. ಯಡಿಯೂರಪ್ಪ ಅವರು ಅಭಿವೃದ್ಧಿಯ ಪರಿಚಯ ಮಾಡಿಕೊಟ್ಟವರು ‘ಮೊದಲು’ ಎನ್ನುವಂಥ ಕೆಲಸಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ ಎಂದು ಹೇಳಿದರು.