ಶಿವಮೊಗ್ಗ:ಸಾಂಸ್ಕೃತಿಕ, ಸಾಹಿತ್ಯಿಕ ಶ್ರೀಮಂತಿಕೆಯುಳ್ಳ ಕರ್ನಾಟಕದ ಸ್ಥಳೀಯ ವಿಶ್ವವಿದ್ಯಾಲಯಗಳಲ್ಲಿನ ಕಲಿಕೆ ಮತ್ತು ಸಂಶೋಧನಾ ಚಟುವಟಿಕೆಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಇಲಾಖೆ ಕಾರ್ಯೋನ್ಮುಖವಾಗಿದೆ. ಈ ಯೋಜನೆಯ ಭಾಗವಾಗಿ ಅಮೆರಿಕದ ಅಥೆನ್ಸ್ ಸ್ಟೇಟ್ ವಿವಿ ಮತ್ತು ಕುವೆಂಪು ವಿವಿಯೊಂದಿಗೆ ಶೈಕ್ಷಣಿಕ ಒಪ್ಪಂದವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ್ ತಿಳಿಸಿದರು.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ, ಕುವೆಂಪು ವಿಶ್ವವಿದ್ಯಾಲಯ ಮತ್ತು ಅಮೆರಿಕದ ಅಥೆನ್ಸ್ ಸ್ಟೇಟ್ ವಿಶ್ವವಿದ್ಯಾಲಯಗಳ ತ್ರಿಸದಸ್ಯ ಶೈಕ್ಷಣಿಕ - ಸಂಶೋಧನಾ ಒಪ್ಪಂದಕ್ಕೆ ಸಹಿ ಹಾಕುವ ಕಾರ್ಯಕ್ರಮ ಆನ್‌ಲೈನ್ ಮೂಲಕ ಕುವೆಂಪು ವಿಶ್ವವಿದ್ಯಾಲಯದ ಹೊಸ ಸಿಂಡಿಕೇಟ್ ಸಭಾಂಗಣದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಸಚಿವರು, ಕರ್ನಾಟಕದ ನೆಲದಲ್ಲಿನ ವಿವಿಗಳಲ್ಲಿ ಕಲಿತ ವಿದ್ಯಾರ್ಥಿಗಳು ಈಗಾಗಲೇ ಅಮೆರಿಕದ ಕ್ಯಾಲಿಫೋರ್ನಿಯಾದ ಸಿಲಿಕಾನ್ ವ್ಯಾಲಿಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ. ಪ್ರತಿಯೊಂದು ಅಮೆರಿಕಾದ ಕಂಪನಿಯು ಭಾರತದೊಂದಿಗೆ ಆಳವಾದ ಸಂಬಂಧ ಹೊಂದಿವೆ. ಇದನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಶೈಕ್ಷಣಿಕ ಹಂತದಿಂದಲೇ ಕೊಡುಕೊಳ್ಳುವಿಕೆಯ ಪ್ರಕ್ರಿಯೆ ಆರಂಭಿಸಬೇಕಿದೆ. ಕುವೆಂಪು ವಿವಿ ಮತ್ತು ಅಥೆನ್ಸ್ ಸ್ಟೇಟ್ ವಿವಿಗಳ ನಡುವಿನ ಶೈಕ್ಷಣಿಕ-ಸಂಶೋಧನಾ ಒಪ್ಪಂದ ಈ ನಿಟ್ಟಿನಲ್ಲಿ ಒಂದು ಆರಂಭವಾಗಿದೆ. ಪ್ರತಿಭಾನ್ವಿತ, ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿಸುವ ಕಡೆಗೆ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.