ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು, ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಗ್ಗೆ 6ರಿಂದ 9ರವರೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಾಕ್‍ಡೌನ್ ಮುಂದುವರಿಕೆ ಕುರಿತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ನಿಧಾನವಾಗಿ ಕಡಿಮೆಯಾಗುತ್ತಿದೆ. ಆದರೆ ಶಿವಮೊಗ್ಗ ನಗರದಲ್ಲಿ ಈಗಲೂ ಶೇ.13ರ ಆಸುಪಾಸಿನಲ್ಲಿದ್ದು, ಭದ್ರಾವತಿಯಲ್ಲಿ ಸುಮಾರು ಶೇ.10ರಷ್ಟು ಪಾಸಿಟಿವಿಟಿ ಪ್ರಮಾಣ ಇದೆ. ಈ ಹಿನ್ನೆಲೆ ಮುಂದಿನ ಒಂದು ವಾರಗಳ ಕಾಲ ಲಾಕ್‍ಡೌನ್ ಇದೇ ರೀತಿ ಮುಂದುವರೆಸಲು ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಒಪ್ಪಿಗೆ ಸೂಚಿಸಿದ್ದಾರೆ. ಲಾಕ್‍ಡೌನ್ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಲಾಗಿರುವ ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಮಾತ್ರ ಅವಕಾಶವಿದೆ. ಪ್ರಸ್ತುತ ತರಕಾರಿ, ದಿನಸಿಯಂತಹ ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಗ್ಗೆ 6ರಿಂದ 8ರವರೆಗೆ ಅವಕಾಶವಿದ್ದು, ಅದನ್ನು ಒಂದು ಗಂಟೆ ವಿಸ್ತರಿಸಲಾಗಿದೆ ಎಂದರು.