ಶಿವಮೊಗ್ಗ: ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದ್ದು, ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಓದಿ: ಶೀಘ್ರವೇ ಭಾರತದಲ್ಲಿ ಇನ್ನಷ್ಟು ಕೊರೊನಾ ಲಸಿಕೆಗಳು ಬರಲಿವೆ: ಜಾಗತಿಕ ರಾಷ್ಟ್ರಗಳಿಗೆ ನಮೋ ಅಭಯ
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಶಿವಮೊಗ್ಗ ನಗರದ ಸವಳಂಗ ರಸ್ತೆ, ಕಾಶಿಪುರ ಹಾಗೂ ಭದ್ರಾವತಿಯಲ್ಲಿ ಒಟ್ಟು 4 ರೈಲ್ವೆ ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಸವಳಂಗ ರಸ್ತೆಯಲ್ಲಿ ಮೇಲ್ಸೇತುವೆ ಮತ್ತು ಕೆಳಸೇತುವೆ ನಿರ್ಮಾಣಕ್ಕೆ ಸರ್ಕಾರ 60.76 ಕೋಟಿ ರೂ. ಬಿಡುಗಡೆ ಮಾಡಿದೆ.
ಇಲ್ಲಿ ಭೂ ಸ್ವಾಧೀನ ಪ್ರಕ್ರಿಯೆ, ವಿದ್ಯುತ್ ಕಂಬಗಳ ಸ್ಥಳಾಂತರ ಇತ್ಯಾದಿ ಕಾರ್ಯಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಕಾಶಿಪುರ ರೈಲ್ವೆ ಕ್ರಾಸಿಂಗ್ ಬಳಿ ಮೇಲ್ಸೇತುವೆ ನಿರ್ಮಾಣಕ್ಕೆ 30 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಭದ್ರಾವತಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ 49 ಕೋಟಿ ರೂ. ಬಿಡುಗಡೆಯಾಗಿದೆ ಎಂದರು.
ಪರ್ಯಾಯ ರಸ್ತೆ:
ಮಾರ್ಚ್ 1ರಿಂದ ಎಲ್ಲಾ ಕಾಮಗಾರಿಗಳನ್ನು ಆರಂಭಿಸಲು ಪೂರ್ವಸಿದ್ಧತೆಗಳನ್ನು ಪೂರ್ಣಗೊಳಿಸಬೇಕು. ಎಲ್ಲಾ ರೈಲ್ವೆ ಸೇತುವೆಗಳ ನಿರ್ಮಾಣ ಕಾರ್ಯವನ್ನು ದಾಖಲೆ ಸಮಯದ ಒಳಗಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಕಾಮಗಾರಿ ಅವಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗುತ್ತಿದೆ. ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲತೆಗಳು ಆಗದಂತೆ ಸೂಕ್ತ ಪರ್ಯಾಯ ರಸ್ತೆಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಜಿಲ್ಲೆಯಲ್ಲಿ ರೈಲ್ವೆ ಕೋಚಿಂಗ್ ಡಿಪೋ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ 60 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದೆ. ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಹಳಿ ನಿರ್ಮಾಣ ಕಾಮಗಾರಿಯ ಭೂ ಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಥಮ ಹಂತದ ಕಾಮಗಾರಿಗಳಿಗೆ ಟೆಂಡರ್ ಕರೆಯುವ ಪ್ರಕ್ರಿಯೆ ಹಂತದಲ್ಲಿದೆ.
ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಭೂ ಸ್ವಾಧೀನ ಪ್ರಕ್ರಿಯೆ ಮತ್ತು ಕಾಮಗಾರಿಗಳ ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಿದೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಜಿಲ್ಲೆಯ ರೈಲ್ವೆ ಕ್ಷೇತ್ರದಲ್ಲಿ ಐತಿಹಾಸಿಕ ಬದಲಾವಣೆಗಳನ್ನು ಕಾಣಬಹುದಾಗಿದೆ ಎಂದರು.
ಕೇಂದ್ರ ರೈಲ್ವೆ ಸಚಿವರ ಆಗಮನ:
ಜಿಲ್ಲೆಯಲ್ಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್, ಮಾರ್ಚ್ ಮೊದಲ ವಾರದಲ್ಲಿ ಶಿವಮೊಗ್ಗಕ್ಕೆ ಆಗಮಿಸುವ ಸಾಧ್ಯತೆಯಿದೆ. ಸಚಿವರು ಆ ಸಂದರ್ಭದಲ್ಲಿ ರೈಲ್ವೆ ಕಾಮಗಾರಿಗಳ ಭೂಮಿಪೂಜೆ ಮತ್ತು ಉದ್ಘಾಟನೆ ಕಾರ್ಯಗಳನ್ನು ನೆರವೇರಿಸಲಿದ್ದಾರೆ ಎಂದರು.