ಶಿವಮೊಗ್ಗ:ಶಾಲೆಗಳಲ್ಲಿ ಕಲಿಕೆಯ ಗುಣಮಟ್ಟವನ್ನು ಉತ್ತಮಪಡಿಸಲು ಬಿಇಒ ಸೇರಿದಂತೆ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದರು.
ಡಿಡಿಪಿಐ ಮತ್ತು ಬಿಇಒಗಳು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಕಲಿಕೆಯ ಗುಣಮಟ್ಟವನ್ನು ನಿರಂತರವಾಗಿ ಗಮನಿಸಬೇಕು. ತರಗತಿಯಲ್ಲಿ ಕುಳಿತುಕೊಂಡು ಶಿಕ್ಷಕರ ಬೋಧನಾ ಮಟ್ಟವನ್ನು ಗಮನಿಸಿ ಅವರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ಈ ವರ್ಷ ಮಾಡಿದ ರೀತಿಯಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳಲ್ಲೂ ಮಾಡಬೇಕು ಎಂದು ಹೇಳಿದರು.
ಶಾಲೆಗಳಲ್ಲಿ ಲಭ್ಯವಿರುವ ಮೂಲಸೌಲಭ್ಯಗಳನ್ನು ಅನುಸರಿಸಿ ಶಾಲೆಗಳನ್ನು ಎ, ಬಿ ಮತ್ತು ಸಿ ವಿಭಾಗಗಳಲ್ಲಿ ಗುರುತಿಸಲಾಗುತ್ತಿದೆ. ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಹಕಾರದೊಂದಿಗೆ ಮುಂದಿನ ಒಂದು ವರ್ಷದ ಒಳಗಾಗಿ ಬಿ ವಿಭಾಗದಲ್ಲಿರುವ ಎಲ್ಲಾ ಶಾಲೆಗಳನ್ನು ಎ ವಿಭಾಗ ಸೇರುವಂತೆ ಮೇಲ್ದರ್ಜೆಗೇರಿಸಬೇಕು. ಇಲಾಖಾ ಅನುದಾನ ಮಾತ್ರವಲ್ಲದೆ ಉದ್ಯೋಗ ಖಾತ್ರಿ ಯೋಜನೆ, ಜೆಎಂಎಂ ಯೋಜನೆಯ ಲಾಭವನ್ನು ಪಡೆದುಕೊಂಡು ಪ್ರತಿ ಶಾಲೆಗೆ ಕುಡಿಯುವ ನೀರು, ಶೌಚಾಲಯ, ಕಾಂಪೌಂಡ್, ಆಟದ ಮೈದಾನವನ್ನು ಒದಗಿಸುವ ವ್ಯವಸ್ಥೆಯನ್ನು ಮಾಡಬೇಕು.