ಕರ್ನಾಟಕ

karnataka

ETV Bharat / state

ನೂತನ ಶಿಕ್ಷಣ ನೀತಿಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಳ: ಸಚಿವ ಡಾ.ಅಶ್ವತ್ಥ್​ ನಾರಾಯಣ್​ - New Education Policy to Improve Education Quality

ಮೂರು ದಶಕಗಳ ಬಳಿಕ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(NEP) ಜಾರಿಗೊಳಿಸಲಾಗಿದೆ. ಇದು ಶಿಕ್ಷಣ ಕ್ಷೇತ್ರದಲ್ಲಿನ ಎಲ್ಲಾ ಲೋಪದೋಷಗಳನ್ನು ಸರಿಪಡಿಸಿ ಗುಣಮಟ್ಟ ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​ ನಾರಾಯಣ್ ಅಭಿಪ್ರಾಯಪಟ್ಟರು.

ಡಾ.ಅಶ್ವತ್ಥ​ ನಾರಾಯಣ್​
ಡಾ.ಅಶ್ವತ್ಥ​ ನಾರಾಯಣ್​

By

Published : Oct 7, 2021, 7:09 AM IST

ಶಿವಮೊಗ್ಗ: 'ಶಿಕ್ಷಣ ಕ್ಷೇತ್ರದಲ್ಲಿನ ಎಲ್ಲಾ ಲೋಪದೋಷಗಳನ್ನು ಸರಿಪಡಿಸಿ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ' ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ್​ ಹೇಳಿದರು.

ಸಹ್ಯಾದ್ರಿ ಕಾಲೇಜಿನಲ್ಲಿ 'ರಾಷ್ಟ್ರೀಯ ಶಿಕ್ಷಣ ನೀತಿ- 2021' ಕುರಿತಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

'ಮೂರು ದಶಕಗಳ ಬಳಿಕ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ಶಿಕ್ಷಣದ ಮೂಲಕ ಮಾತ್ರ ಸಮಾಜದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಇಂದು ಎಲ್ಲಾ ಕ್ಷೇತ್ರಗಳಲ್ಲೂ ಪ್ರಬಲ ಸ್ಪರ್ಧೆಯಿದೆ. ಈ ಸ್ಪರ್ಧೆಯಲ್ಲಿ ಜಯಗಳಿಸಿದರೆ ಮಾತ್ರ ಅಸ್ತಿತ್ವ ಕಂಡುಕೊಳ್ಳಬಹುದು. ಇಂತಹ ಸ್ಪರ್ಧೆಯನ್ನು ಎದುರಿಸಲು ಗುಣಮಟ್ಟದ ಶಿಕ್ಷಣ ಅಗತ್ಯವಿದೆ. ಈ ನಿಟ್ಟಿನಲ್ಲಿ ನೂತನ ಶಿಕ್ಷಣ ನೀತಿ ಪೂರಕವಾಗಿದೆ' ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ- 2021 ಕುರಿತಾದ ಕಾರ್ಯಾಗಾರದಲ್ಲಿ ಮಾತನಾಡಿದ ಸಚಿವ ಅಶ್ವತ್ಥ್​ ನಾರಾಯಣ್

'ನೂತನ ಶಿಕ್ಷಣ ನೀತಿಯು ಶಿಕ್ಷಣ ಸಂಸ್ಥೆಗಳಿಗೆ ಜವಾಬ್ದಾರಿಯೊಂದಿಗೆ ಸಂಪೂರ್ಣ ಅಧಿಕಾರವನ್ನು ನೀಡುತ್ತದೆ. ಪ್ರತಿಯೊಂದು ಸಂಸ್ಥೆ ಸ್ವಾಯತ್ತತೆಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಸಂಸ್ಥೆಗಳಿಗೆ ಮಾದರಿಯಾಗಿ ಕಾರ್ಯನಿರ್ವಹಿಸಬೇಕಾಗಿದೆ. ಕೇವಲ ಮೂಲಭೂತ ಸೌಕರ್ಯಗಳು ಮಾತ್ರವಲ್ಲ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವುದು, ಅಹವಾಲುಗಳನ್ನು ಸರಿಯಾಗಿ ಆಲಿಸಲು ವೇದಿಕೆಗಳನ್ನು ಕಲ್ಪಿಸಬೇಕು. ಪ್ರತಿಯೊಂದು ಸಂಸ್ಥೆಗಳು ಪಡೆಯುವ ಶುಲ್ಕದ ವಿವರಗಳನ್ನು ಸಹ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರಬೇಕಾಗಿದೆ' ಎಂದು ಹೇಳಿದರು.

ಕೊನೆಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸಚಿವರು ಸಭಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ, 'ಕಳೆದ ಏಳು ವರ್ಷಗಳ ಸತತ ಪರಿಶ್ರಮದ ಬಳಿಕ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ. ಮುಂದಿನ 10 ರಿಂದ 15 ವರ್ಷಗಳ ಅವಧಿಯಲ್ಲಿ ಹೊಸ ಶಿಕ್ಷಣ ನೀತಿಯ ಪರಿಣಾಮಗಳನ್ನು ಗುರುತಿಸಲು ಸಾಧ್ಯವಿದೆ. ಕರ್ನಾಟಕ ಶಿಕ್ಷಣ ನೀತಿಯನ್ನು ಜಾರಿಗೆ ತಂದಿರುವ ಪ್ರಥಮ ರಾಜ್ಯವಾಗಿದ್ದು, ಇದನ್ನು ಸಮರ್ಪಕವಾಗಿ ಜಾರಿಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ' ಎಂದರು.

ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ ಮಾತನಾಡಿ, 'ಪ್ರತಿಯೊಬ್ಬರೊಳಗಿರುವ ಪ್ರತಿಭೆಯನ್ನು ಗುರುತಿಸಿ ಅದರ ವಿಕಸನಕ್ಕೆ ಅವಕಾಶ ಕಲ್ಪಿಸಲು ನೂತನ ಶಿಕ್ಷಣ ನೀತಿಯಿಂದ ಸಾಧ್ಯವಿದೆ' ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಡಾ.ವೀರಭದ್ರಪ್ಪ, ರಿಜಿಸ್ಟ್ರಾರ್ ಅನುರಾಧ, ಗೋಪಾಲಕೃಷ್ಣ ಜೋಷಿ, ಧನಂಜಯ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ABOUT THE AUTHOR

...view details