ಶಿವಮೊಗ್ಗ: ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಹಕ್ಕಿಜ್ವರದ ಪ್ರಕರಣ ವರದಿಯಾಗಿಲ್ಲ. ಹಕ್ಕಿಜ್ವರದ ಬಗ್ಗೆ ತೀವ್ರ ನಿಗಾವಹಿಸಲಾಗಿದ್ದು, ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಕ್ಕಿಜ್ವರ ಕುರಿತಾಗಿ ಕೈಗೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಡಿಸಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ನೆರೆಯ ರಾಜ್ಯದಲ್ಲಿ ಹಕ್ಕಿಜ್ವರದ ಪ್ರಕರಣ ಕಂಡು ಬಂದಿದ್ದರೂ ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲ. ಹಕ್ಕಿಜ್ವರದ ಬಗ್ಗೆ ನಿಗಾವಹಿಸಲು ಎಲ್ಲ ತಾಲೂಕುಗಳಲ್ಲಿ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಹಕ್ಕಿಜ್ವರದ ಬಗ್ಗೆ ಸಂದೇಹಾಸ್ಪದ ಪ್ರಕರಣಗಳು ಪತ್ತೆಯಾದರೆ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ. ಹಕ್ಕಿಗಳು ಸತ್ತಿರುವ ಬಗ್ಗೆ ವರದಿಯಾದರೆ ಈ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಬೇಕು. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಗತ್ಯವಿದ್ದರೆ ಪರಿಶೀಲನೆಗೆ ಪ್ರಯೋಗಾಲಯಕ್ಕೆ ಕಳುಹಿಸಬೇಕು ಎಂದರು.
ಹಕ್ಕಿಜ್ವರದ ಬಗ್ಗೆ ಆತಂಕ ಬೇಡ: ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಬೇಕು. ಪೌಲ್ಟ್ರಿಯಲ್ಲಿ ಅಥವಾ ಹಕ್ಕಿಯೊಂದಿಗೆ ನೇರ ಸಂಪರ್ಕವಿರುವವರು ಹಕ್ಕಿಜ್ವರದಿಂದ ಬಾಧಿತರಾಗುವ ಸಾಧ್ಯತೆಯಿದೆ. ಅಂತಹ ಸಂದರ್ಭದಲ್ಲಿ ಆ ವ್ಯಕ್ತಿಗಳನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡುವ ಅಗತ್ಯ ಬರಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ ಸುರಗಿಹಳ್ಳಿ ತಿಳಿಸಿದರು.