ಶಿವಮೊಗ್ಗ: ದುಬೈಯಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 53 ವರ್ಷದ ವ್ಯಕ್ತಿಗೆ ಕೊರೊನಾ ನೆಗೆಟಿವ್ ವರದಿ ಬಂದಿದ್ದು, ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾ ಮೂಲದ ರೂಪಾಂತರಿ ಕೊರೊನಾ ವೈರಸ್ ಪತ್ತೆಯಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.
ಇಂದು ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದುಬೈಯಿಂದ ಆಗಮಿಸಿದ್ದ ವ್ಯಕ್ತಿಯ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಪ್ರಾಥಮಿಕ ಸಂಪರ್ಕ ಹೊಂದಿರುವ ಎಲ್ಲರಿಗೂ ಸಹ ನೆಗೆಟಿವ್ ಬಂದಿದೆ. ಈ ವ್ಯಕ್ತಿಯೊಂದಿಗೆ 2ನೇ ಹಂತದ ಸಂಪರ್ಕ ಹೊಂದಿದ್ದ 39 ಮಂದಿಯ ತಪಾಸಣೆ ನಡೆಸಲಾಗಿದ್ದು, ಎಲ್ಲರ ವರದಿ ನೆಗೆಟಿವ್ ಇದೆ. ಈ ಹಿನ್ನೆಲೆ ಯಾರೂ ಅನಗತ್ಯವಾಗಿ ಭಯ ಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆ, ಆಯುರ್ವೇದಿಕ್ ಕಾಲೇಜು ಆಸ್ಪತ್ರೆ, 41 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 7 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತಿದೆ. ಇದಲ್ಲದೆ ಶಿವಮೊಗ್ಗ ನಗರದ 8 ಖಾಸಗಿ ಆಸ್ಪತ್ರೆಗಳಲ್ಲಿ 250 ರೂ. ನಿಗದಿಪಡಿಸಿ ಲಸಿಕೆ ನೀಡಲಾಗುತ್ತಿದೆ. ಸ್ಥಳದಲ್ಲಿಯೇ ನೋಂದಣಿ ಮಾಡಲು ಅವಕಾಶವಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.