ಶಿವಮೊಗ್ಗ:ಹೊಸನಗರ ತಾಲೂಕಿನ ಕೊಡೂರಿನ ಅಮ್ಮನ ಘಟ್ಟ ಜೇನುಕಲ್ಲಮ್ಮ ನೂತನ ದೇವಾಲಯದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಜನಪ್ರತಿನಿಧಿಗಳನ್ನು ಕಡೆಗಣಿಸಲಾಗಿದೆ. ಈ ಮೂಲಕ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಭಾಗವಹಿಸಿದ್ದು, ವೇದಿಕೆಯ ಎದುರು ಮಾರುತಿಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಚಿದಂಬರ್ ಎಂಬವರು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದರು. ಕಪ್ಪು ಬಾವುಟ ತೋರಿಸಿದ್ದಲ್ಲದೇ ಧಿಕ್ಕಾರ ಕೂಗಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಶಿಷ್ಟಾಚಾರ ಪಾಲಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇತ್ತೀಚಿನ ಸರ್ಕಾರಿ ಕಾರ್ಯಕ್ರಮದಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಅಧ್ಯಕ್ಷರನ್ನು ಕಡೆಗಣನೆ ಮಾಡಲಾಗುತ್ತಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯಕ್ರಮ ನಡೆದರೂ ಸಹ ಗ್ರಾಮ ಪಂಚಾಯತಿ ಅಧ್ಯಕ್ಷರನ್ನು ಹಾಗೂ ಸದಸ್ಯರನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಸರ್ಕಾರಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆಯಾಗುತ್ತಿದೆ ಎಂದು ಅವರು ದೂರಿದ್ದಾರೆ.
ಕಪ್ಪು ಬಾವುಟ ತೋರಿಸಿ ಆಕ್ರೋಶ: ಕಾರ್ಯಕ್ರಮದಲ್ಲಿ ಮಾರುತಿಪುರ ಪಂಚಾಯತ್ ಹಾಗೂ ಮಾರುತಿಪುರ ಗ್ರಾಮ ಪಂಚಾಯತ್ ನಾಗರಿಕರಿಗೆ ಅವಮಾನಿಸಿದ್ದು ಖಂಡನೀಯ. ಮುಂದಿನ ದಿನಗಳಲ್ಲಿ ಇಂಥ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಶಿಷ್ಟಾಚಾರ ಉಲ್ಲಂಘನೆ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷರ ಒಕ್ಕೂಟದಿಂದ ಮನವಿ ಸಲ್ಲಿಸಲು ಕಾರ್ಯಕ್ರಮ ನಡೆಯುತ್ತಿದ್ದ ಜೇನುಕಲ್ಲು ದೇವಾಲಯದ ಬಳಿ ಐದಾರು ಜನರೊಂದಿಗೆ ಅಧ್ಯಕ್ಷರು ಬಂದಾಗ ಪೊಲೀಸರು ಅವರನ್ನೆಲ್ಲಾ ಬಂಧಿಸಿದ್ದಾರೆ. ಪ್ರತಿಭಟನಾಕಾರರನ್ನು ತಡೆದ ಪೊಲೀಸರು, ಗ್ರಾಮ ಪಂಚಾಯತ್ ಸದಸ್ಯರಾದ ಇಂದ್ರೇಶ್ ಎನ್., ಪ್ರಕಾಶ್ ಜಿ.ಎಂ., ಶಂಕರ್ ಶೆಟ್ಟಿ, ನಗರ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ಶೆಟ್ಟಿ, ಚಂದ್ರಪ್ಪ, ಉಪಾಧ್ಯಕ್ಷೆ ಜಯಮ್ಮ, ಸದಸ್ಯ ದೀಪಿಕಾ ಕೃಷ್ಣ ಎಂಬವರನ್ನು ವಶಕ್ಕೆ ಪಡೆದು ರಿಪ್ಪನ್ ಪೇಟೆ ಠಾಣೆಗೆ ಕರೆತಂದು, ಬಳಿಕ ಬಿಡುಗಡೆಗೊಳಿಸಿದ್ದಾರೆ.