ಶಿವಮೊಗ್ಗ:ವಿಧಾನಪರಿಷತ್ ಉಪಸಭಾಪತಿ ಧರ್ಮೇಗೌಡರ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದ್ದು, ಪಾರ್ಥಿವ ಶರೀರವನ್ನು ಸ್ವಗ್ರಾಮ ಸರಪನಹಳ್ಳಿಗೆ ತೆಗೆದುಕೊಂಡು ಹೋಗಲಾಯಿತು.
ಬೆಳಗ್ಗೆ ಸುಮಾರು 9 ಗಂಟೆಯಿಂದ ಪ್ರಾರಂಭವಾದ ಮರಣೋತ್ತರ ಪರೀಕ್ಷೆ ಮಧ್ಯಾಹ್ನ 1.20 ರ ಸುಮಾರಿಗೆ ಮುಗಿದಿದೆ. ನಂತರ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಿ ಡಿಸಿ ಕೆ.ಬಿ.ಶಿವಕುಮಾರ್ ಹೂಗುಚ್ಚವಿಟ್ಟು ಗೌರವ ವಂದನೆ ಸಲ್ಲಿಸಿದರು.
ಸ್ವಗ್ರಾಮಕ್ಕೆ ಪಾರ್ಥಿವ ಶರೀರ ರವಾನೆ ಸಚಿವ ಬಸವರಾಜ್, ಸಂಸದ ಬಿ.ವೈ.ರಾಘವೇಂದ್ರ ಸಹ ಹೂಗುಚ್ಚವಿಟ್ಟು ಅಂತಿಮ ನಮನ ಸಲ್ಲಿಸಿದರು. ನಂತರ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರುಳಿಧರ್ ಸೇರಿದಂತೆ ಜೆಡಿಎಸ್ ಹಾಗೂ ಬಿಜೆಪಿಯ ಮುಖಂಡರು ಅಂತಿಮ ನಮನ ಸಲ್ಲಿಸಿದರು.
ಸಂಜೆಯಷ್ಟರಲ್ಲಿ ಅಂತಿಮ ವಿಧಿವಿಧಾನ ನಡೆಯಬೇಕಾದ ಕಾರಣ ವಿಶೇಷ ಆ್ಯಂಬ್ಯುಲೆನ್ಸ್ನಲ್ಲಿ ಮೃತದೇಹವನ್ನು ಸರಪನಹಳ್ಳಿಯ ತೋಟದ ಮನೆಗೆ ತೆಗೆದುಕೊಂಡು ಹೋಗಲಾಯಿತು.
ಓದಿ:ಧರ್ಮೇಗೌಡರನ್ನು ನೆನೆದು ಭಾವುಕರಾದ ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ!
ಅಂತಿಮ ನಮನ ಸಲ್ಲಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕಳೆದ ತಿಂಗಳು ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕಾರ್ಯಕ್ರಮದಲ್ಲಿ ಧರ್ಮೇಗೌಡರ ಜೊತೆ ವೇದಿಕೆ ಹಂಚಿಕೊಂಡಿದ್ದೆ. ಅವರು ಸೌಮ್ಯ ಸ್ವಭಾವದ ವ್ಯಕ್ತಿ. ಅವರ ಮಾತು ಯುವಕರಿಗೆ ಸ್ಫೂರ್ತಿ ಬರುವಂತಿತ್ತು. ಪರಿಷತ್ನಲ್ಲಿ ನಡೆದ ಘಟನೆ ಅವರ ಮನಸ್ಸಿಗೆ ನೋವುಂಟು ಮಾಡಿರಬಹುದು. ಅವರ ಕುಟುಂಬಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದರು.