ಶಿವಮೊಗ್ಗ:ರಾಜ್ಯಸರ್ಕಾರದ ಬೆಳಕು ಹಾಗೂ ಅಮೃತ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕವಿಲ್ಲದ ಮನೆಗಳಿಗೆ ವಿದ್ಯುತ್ ಒದಗಿಸಿ, ಯಶಸ್ಸುಗೊಳಿಸಲಾಗುವುದು ಎಂದು ವಿದ್ಯುತ್ ಖಾತೆ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಸಾಗರ ತಾಲೂಕು ಲ್ಯಾವಿಗೆರೆ ಗ್ರಾಮದಲ್ಲಿ ಕೆಪಿಟಿಸಿಎಲ್ ದಿಂದ ನೂತನ 110/11 ಕೆ.ವಿ ವಿದ್ಯುತ್ ಉಪಕೇಂದ್ರಕ್ಕೆ ಶಂಕುಸ್ಥಾಪನೆ ನೇರವೇರಿಸಿ ಅವರು ಮಾತನಾಡಿದರು. ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕವಿಲ್ಲದ ರೈತರ ಮನೆಗಳಿಗೆ ವಿದ್ಯುತ್ ನೀಡಲಾಗುವುದು. ಅಮೃತ ಜ್ಯೋತಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮನೆಗಳಿಗೆ ಉಚಿತವಾಗಿ 75 ಯೂನಿಟ್ ತನಕ ವಿದ್ಯುತ್ ನೀಡಲಾಗುವುದು ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿ ಏಳು ಕಡೆ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆ ಬಗ್ಗೆ ತಯಾರಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಪ್ರಗತಿ ಗಮನದಲ್ಲಿಟ್ಟುಕೊಂಡ ಉಪ ಕೇಂದ್ರ ಸ್ಥಾಪಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆ ಲಿಂಗನಮಕ್ಕಿ ದೊಡ್ಡ ಪ್ರಮಾಣದ ವಿದ್ಯುತ್ ಉತ್ಪಾದನೆ ಸಿಗುತ್ತಿದೆ. ರಾಜ್ಯದಲ್ಲಿ ಈಗಾಗಲೇ 30 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ನಡೆಯುತ್ತಿದೆ.
ಬೇಡಿಕೆ 14.500 ಸಾವಿರ ಮೆಗಾವ್ಯಾಟ್ ಬೇಡಿಕೆ ಇದೆ. ಹೊಸ ಲೈನಿನ ಅಳವಡಿಕೆ ಸೇರಿದಂತೆ ಇನ್ನಿತರ ವಿದ್ಯುತ್ ಕಾರ್ಯಗಳಲ್ಲಿ ಗುಣಮಟ್ಡ ಚೆನ್ನಾಗಿ ಮಾಡಬೇಕೆಂದು ಇದೆ ಎಂದು ತಿಳಿಸಿದರು. ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಸುನೀಲ್ ಕುಮಾರ್ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಎಂದು ಹೇಳಿದರು. ಈ ವೇಳೆ ಶಾಸಕ ಹಾಲಪ್ಪ ಸೇರಿದಂತೆ ಕೆಪಿಟಿಸಿಎಲ್ ಅಧಿಕಾರಿಗಳು ಹಾಜರಿದ್ದರು.
ಇದನ್ನೂ ಓದಿ:ಕ್ರಿಶ್ಚಿಯನ್ ಮಿಷನರಿಯಿಂದ ಬಲವಂತದ ಮತಾಂತರ, ಬಾಲಕಿಯರಿಗೆ ಕಿರುಕುಳ ಆರೋಪ