ಶಿವಮೊಗ್ಗ:ಡಿಸೆಂಬರ್ ಮಾಸಾಂತ್ಯದೊಳಗಾಗಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಗರದ ನೆಹರೂ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.
ತಮ್ಮ ಕಚೇರಿಯ ಸಭಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗುಂಪು ಹಾಗೂ ವೈಯಕ್ತಿಕ ವಿಭಾಗಗಳಲ್ಲಿ ನಡೆಯುವ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದರು.
ಈ ಕ್ರೀಡಾಕೂಟದ ಯಶಸ್ಸಿಗೆ ಸರ್ಕಾರದ ಎಲ್ಲಾ ಇಲಾಖೆಗಳ ಅಗತ್ಯ ಸಹಕಾರ ನೆರವು ಒದಗಿಸಲು ಸೂಚಿಸಲಾಗಿದ್ದು, 2 ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಕೂಟಕ್ಕೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಸುಮಾರು 3,000ಕ್ಕೂ ಹೆಚ್ಚಿನ ನೌಕರ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಅಗತ್ಯ ಊಟೋಪಹಾರದ ವ್ಯವಸ್ಥೆ ಒದಗಿಸಲಾಗುವುದಲ್ಲದೇ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾ ಪಟುಗಳಿಗೆ ಇಲಾಖೆಯಿಂದ ಅನುಮತಿ ನೀಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಇನ್ನು ಈ ಸಭೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಮಾತನಾಡಿ, ಈ ಬಾರಿಯ ಕ್ರೀಡಾಕೂಟವನ್ನು ವೈಶಿಷ್ಟ್ಯ ಪೂರ್ಣವಾಗಿ ಏರ್ಪಡಿಸಲು ಕೋರಲಾಗಿದ್ದು, ಭಾಗವಹಿಸುವ ಸ್ಪರ್ಧಿಗಳಿಗೆ ಕ್ಯಾಪ್ ಹಾಗೂ ಟಿಶರ್ಟ್‍ನ್ನು ಕೊಡುವಂತೆ ಮನವಿ ಮಾಡಲಾಗಿದೆ ಎಂದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನುರಾಧ ಜಿ, ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ಜಿ.ಪಂ.ಉಪ ಕಾರ್ಯದರ್ಶಿ ಶ್ರೀಧರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.