ಶಿವಮೊಗ್ಗ:ಗ್ರಾಮೀಣ ಪ್ರದೇಶಗಳಲ್ಲಿ ಯೋಜನೆಗಳ ಅನುಷ್ಠಾನದಂತಹ ತೊಂದರೆಗಳು ಇದ್ದರೆ ನೇರವಾಗಿ ತಮ್ಮ ಗಮನಕ್ಕೆ ತರುವಂತೆ ಸಚಿವ ಕೆ. ಎಸ್. ಈಶ್ವರಪ್ಪ ಮನವಿ ಮಾಡಿದರು.
ಶಿವಮೊಗ್ಗದ ರಂಗಾಯಣ ಸಭಾಂಗಣದಲ್ಲಿ ಪಂಚಾಯತ್ ರಾಜ್ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ 'ಒಂದು ದಿನದ ಕಾರ್ಯಾಗಾರ' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರ ಅಭಿವೃದ್ಧಿಯಾದರೇ ಮಾತ್ರ ಹಳ್ಳಿಗಳ ಅಭಿವೃದ್ಧಿ ಸಾಧ್ಯ. ಹಳ್ಳಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗುವುದು. ಗ್ರಾಮೀಣ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಪಂಚಾಯತ್ ರಾಜ್ ಅಧಿಕಾರಿಗಳ ಪಾತ್ರ ಪ್ರಮುಖವಾದದ್ದು. ಸರ್ಕಾರದ ಸೌಲಭ್ಯಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸಲು ಪಿಡಿಒಗಳು ಸೇತುವೆಯಂತೆ ಕಾರ್ಯ ನಿರ್ವಹಿಸಬೇಕು. ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ನೇರವಾಗಿ ಜನಪ್ರತಿನಿಧಿಗಳ ಗಮನಕ್ಕೆ ತಂದು ತೊಂದರೆಗಳನ್ನು ಸರಿಪಡಿಸಬೇಕು. ಪಿಡಿಒಗಳ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು.
ವಿಲೇವಾರಿ ಘಟಕ ಆರಂಭಿಸಲು ಒತ್ತು
ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಜಿಲ್ಲೆಯ 271 ಗ್ರಾಮ ಪಂಚಾಯಿತಿಗಳ ಪೈಕಿ ಕೇವಲ 19 ಪಂಚಾಯಿತಿ ವ್ಯಾಪ್ತಿಯಲ್ಲಿ ವಿಲೇವಾರಿ ಘಟಗಳಿಗೆ ಜಮೀನು ಗುರುತಿಸಲಾಗಿದೆ. ಉಳಿದ ಪಂಚಾಯಿತಿಗಳಲ್ಲಿ ಜಮೀನು ಗುರುತಿಸಿ ಘಟಕಗಳನ್ನು ಆದಷ್ಟು ಬೇಗನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮೀಣ ಭಾಗದಲ್ಲಿ ವಸತಿ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ ಬಗ್ಗೆ ಪ್ರತಿ ಗ್ರಾಮ ಪಂಚಾಯಿತಿಗಳ ಹೊರಗೆ ಸೂಚನಾ ಫಲಕಗಳನ್ನು ಹಾಕಿ ಮಾಹಿತಿ ಪ್ರಕಟಿಸಬೇಕು. ಹೊಸದಾಗಿ ಘಟಕಗಳು ಅಗತ್ಯ ಇರುವ ಕಡೆಗಳಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರು ಆದೇಶಿಸಿದರು.
ಈ ಬಾರಿಯ ಬಜೆಟ್‍ನಲ್ಲಿ ಶೌಚಾಲಯ ನಿರ್ಮಾಣದ ಸಹಾಯಧನವನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು. ಸಾಮೂಹಿಕ ಶೌಚಾಲಯಗಳ ನಿರ್ವಹಣೆಗೂ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಉದ್ಯೋಗ ಖಾತ್ರಿ ಯೋಜನೆ ಬಾಕಿ ಮೊತ್ತ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಈಶ್ವರಪ್ಪ ಹೇಳಿದರು.