ಶಿವಮೊಗ್ಗ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಹಿತ ಕಾಯುವಲ್ಲಿ, ವೇತನ, ಭತ್ಯೆ, ಬಡ್ತಿ ಮತ್ತಿತರ ವಿಷಯಗಳಲ್ಲಿನ ನ್ಯೂನತೆಗಳನ್ನು ಸರಿಪಡಿಸುವಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಭರವಸೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮೊದಲ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಕೇಳಿಬರುತ್ತಿರುವ ಅರಣ್ಯ, ಆರೋಗ್ಯ ಮತ್ತು ಪಂಚಾಯತ್‍ರಾಜ್ ಇಲಾಖಾ ನೌಕರರ ಮೇಲಿನ ಹಲ್ಲೆಗಳ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಕರ್ತವ್ಯನಿರತ ಅಧಿಕಾರಿ ಹಾಗೂ ನೌಕರರ ಮೇಲೆ ಹಲ್ಲೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವ ಮೂಲಕ ಸರ್ಕಾರಿ ನೌಕರರು ನಿರ್ಭೀತಿಯಿಂದ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲಾಗುವುದು. ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಕ್ರಮ ವಹಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗುವುದು ಹಾಗೂ ದೌರ್ಜನ್ಯ ಎಸಗುವ ಪುಂಡರ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು ಎಂದರು.