ಕರ್ನಾಟಕ

karnataka

ETV Bharat / state

ಸಮರ್ಪಕ ಪರಿಶೀಲನೆ ಮಾಡಿಯೇ  ಮತದಾರರ ಪಟ್ಟಿಯಿಂದ ಹೆಸರು ತೆಗೆಯಿರಿ: ಶಾಲಿನಿ ರಜನೀಶ್ ಸೂಚನೆ

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಪರಿಶೀಲನಾ ಸಭೆ ನಡೆಸಿದ ಜಿಲ್ಲಾ ನೋಡಲ್ ಅಧಿಕಾರಿ ಶಾಲಿನಿ ರಜನೀಶ್ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕುವ ಸಂದರ್ಭದಲ್ಲಿ ಕಡ್ಡಾಯವಾಗಿ ಮನೆಗೆ ಭೇಟಿ ನೀಡಿ ಸಮರ್ಪಕವಾಗಿ ಪರಿಶೀಲನೆ ನಡೆಸಿರಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

review-meeting-on-voter-revision
review-meeting-on-voter-revision

By

Published : Jan 25, 2020, 12:01 AM IST

ಶಿವಮೊಗ್ಗ: ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕುವ ಸಂದರ್ಭದಲ್ಲಿ ಕಡ್ಡಾಯವಾಗಿ ಮನೆಗೆ ಭೇಟಿ ನೀಡಿ ಸಮರ್ಪಕವಾಗಿ ಪರಿಶೀಲನೆ ನಡೆಸಿರಬೇಕು ಎಂದು ಮತದಾರರ ಪಟ್ಟಿ ಪರಿಷ್ಕರಣೆ ಜಿಲ್ಲಾ ನೋಡಲ್ ಅಧಿಕಾರಿ ಶಾಲಿನಿ ರಜನೀಶ್ ಅವರು ಸೂಚನೆ ನೀಡಿದರು.

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಪರಿಶೀಲನಾ ಸಭೆ ನಡೆಸಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಪಡೆಯಲಾಗಿರುವ ಎಲ್ಲಾ ಅರ್ಜಿಗಳನ್ನು ಸೋಮವಾರದ ಒಳಗಾಗಿ ವಿಲೇವಾರಿ ಮಾಡಬೇಕು. ಇನ್ನೂ 3 ಸಾವಿರ ಅರ್ಜಿಗಳು ವಿಲೇವಾರಿಗೆ ಬಾಕಿಯಿದ್ದು, ಎರಡು ದಿನಗಳಲ್ಲಿ ಪೂರ್ಣಗೊಳಿಸಬೇಕು. ಮತದಾರರು ನೀಡಿರುವ ವಿಳಾಸದಲ್ಲಿ ವಾಸ ಇಲ್ಲದಿರುವುದನ್ನು ಖಾತ್ರಿಪಡಿಸಿದ ಬಳಿಕ ಮಾತ್ರ ಪಟ್ಟಿಯಿಂದ ಹೆಸರು ತೆಗೆದು ಹಾಕಬಹುದು. ಅಸಮರ್ಪಕವಾಗಿ ತೆಗೆದು ಹಾಕಬಾರದು ಎಂದು ಅವರು ಎಚ್ಚರಿಕೆ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಪರಿಶೀಲನಾ ಸಭೆ

1950 ಟೋಲ್ ಫ್ರೀ ಸಂಖ್ಯೆಯಲ್ಲಿ ಸ್ವೀಕರಿಸಲಾಗಿರುವ ಎಲ್ಲಾ ದೂರುಗಳನ್ನು ತಕ್ಷಣ ವಿಲೇವಾರಿ ಮಾಡಬೇಕು. ಸಾರ್ವಜನಿಕರು ಸಹ ಈ ಸೌಲಭ್ಯವನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಮತದಾರರ ಹಾಗೂ ಜನಸಂಖ್ಯೆ ಅನುಪಾತ ಶೇ.72ರಷ್ಟಿರಬೇಕು. ಆದರೆ ಶಿವಮೊಗ್ಗದಲ್ಲಿ ಇದರ ಪ್ರಮಾಣ ಶೇ.82, ತೀರ್ಥಹಳ್ಳಿಯಲ್ಲಿ ಶೇ.78ರಷ್ಟಿದೆ. ಇಂತಹ ಪ್ರಕರಣಗಳಲ್ಲಿ ಕೂಲಂಕುಶವಾಗಿ ಪರಿಶೀಲಿಸಿ ಅನುಪಾತ ಸರಿಯಾಗುವಂತೆ ನೋಡಿಕೊಳ್ಳಬೇಕು ಎಂದರು.

ಸಾರ್ವಜನಿಕರ ಜವಾಬ್ದಾರಿ: ಮತದಾರರ ಪಟ್ಟಿ ಪರಿಷ್ಕರಣೆ ಕುರಿತಾಗಿ ಮನೆಗಳಿಗೆ ಆಗಮಿಸುವ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡಿ ಸಹಕರಿಸುವಂತೆ ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.

ಕಾರ್ಯದರ್ಶಿ ಸೂಚನೆ: ಮತದಾರರ ಪಟ್ಟಿ ಪರಿಷ್ಕರಣೆ ಜಿಲ್ಲಾ ನೋಡಲ್ ಅಧಿಕಾರಿ ಶಾಲಿನಿ ರಜನೀಶ್ ಅವರು ಭದ್ರಾವತಿ ತಾಲೂಕಿನ ಕೂಡಲಗೆರೆ ಗ್ರಾಮ ಪಂಚಾಯತ್‍ನ ಮತಗಟ್ಟೆ ಕೇಂದ್ರ 9ಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಬಿಕಾಂ ವಿದ್ಯಾರ್ಥಿನಿಯೊಬ್ಬಳ ಬಳಿ ಚುನಾವಣಾ ಗುರುತಿನ ಚೀಟಿ ಇದೆಯೇ ಎಂದು ಪ್ರಶ್ನಿಸಿದರು. ಆಕೆ ಇನ್ನೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಲ್ಲ ಎಂದಾಗ, ತಕ್ಷಣ ಆಕೆಗೆ ನಿಗದಿತ ಅರ್ಜಿ ನಮೂನೆ ನೀಡಿ ಶನಿವಾರ ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆ ಸಂದರ್ಭದಲ್ಲಿ ಮತದಾರರ ಗುರುತಿನ ಚೀಟಿಯನ್ನು ವಿತರಿಸುವಂತೆ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು. ತನ್ನ ಎಲ್ಲ ಸಹಪಾಠಿಗಳಿಗೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ತಿಳಿಸುವಂತೆ ಆಕೆಗೆ ಕಾರ್ಯದರ್ಶಿ ಅವರು ಮನವಿ ಮಾಡಿದರು. ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳು ಕನಿಷ್ಟ ಶೇ.10ರಷ್ಟು ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಪರಿಶೀಲಿಸುವಂತೆ ಕಾರ್ಯದರ್ಶಿ ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಅನುರಾಧ, ಉಪವಿಭಾಗಾಧಿಕಾರಿ ಪ್ರಕಾಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.

ABOUT THE AUTHOR

...view details