ಶಿವಮೊಗ್ಗ:ಬೆಂಗಳೂರಿನ ಜೆ.ಪಿ. ನಾರಾಯಣ ಸ್ವಾಮಿ ಪ್ರತಿಷ್ಠಾನ, ಜಿಲ್ಲಾ ಆರ್ಯ ಈಡಿಗ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಫೆ. 24ರಂದು ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಶ್ರೀಧರ್ ತಿಳಿಸಿದ್ದಾರೆ.
ಪ್ರತಿಭಾ ಪುರಸ್ಕಾರ: ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ
ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಫೆ. 24ರಂದು ಶಿವಮೊಗ್ಗದಲ್ಲಿ ವಿದ್ಯಾರ್ಥಿ ವೇತನ ಹಂಚಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಡಿಗ ಸಂಘದ ರಾಜ್ಯಾಧ್ಯಕ್ಷ ಹಾಗೂ ಉದ್ಯಮಿಗಳು ಆಗಿದ್ದ ದಿ. ಜೆ.ಪಿ. ನಾರಾಯಣಸ್ವಾಮಿಯವರ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಲಾಗಿದೆ. ಪ್ರತಿಷ್ಠಾನದ ಅಧ್ಯಕ್ಷರಾಗಿ ಅವರ ಪುತ್ರ ಜೆ.ಪಿ. ಸುಧಾಕರ್ ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಸಮಾಜದ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಿದ್ದು, ರಾಜ್ಯದಲ್ಲಿನ ಕೆಲ ಬಡ ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಲಿದ್ದಾರೆ ಎಂದರು.
ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಸುಮಾರು 500 ಈಡಿಗ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಸಮಾಜದ ಸಮುದಾಯ ಭವನದಲ್ಲಿ ನೀಡಲಾಗುವುದು. ಅದರಲ್ಲೂ ಪಿಯುಸಿ ನಂತರದ ವಿದ್ಯಾಭ್ಯಾಸಕ್ಕಾಗಿ ಈ ಹಣ ನೀಡಲಾಗುತ್ತದೆ. ಪದವಿಯಲ್ಲಿ ಓದುತ್ತಿರುವವರಿಗೆ ಐದು ಸಾವಿರ ರೂ., ಉನ್ನತ ಶಿಕ್ಷಣ ಓದುತ್ತಿರುವವರಿಗೆ ಎಂಟು ಸಾವಿರ ರೂ. ಹಾಗೂ ವೈದ್ಯಕೀಯ ವಿದ್ಯಾಭ್ಯಾಸ ಮಾಡುವವರಿಗೆ 10,000 ರೂ. ನೀಡಲಾಗುವುದು ಎಂದು ಈ ವೇಳೆ ತಿಳಿಸಿದರು.