ಶಿವಮೊಗ್ಗ:ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.) ಸಂಘಟನೆ ಪ್ರತ್ಯೇಕ ಪ್ರತಿಭಟನೆ ನಡೆಸಿವೆ.
ಶಿವಮೊಗ್ಗದಲ್ಲಿ ಕಾಂಗ್ರೆಸ್ ಹಾಗೂ ಪಿಎಫ್ಐ ಪ್ರತ್ಯೇಕ ಪ್ರತಿಭಟನೆ ನಗರದ ಗಾಂಧಿ ಪಾರ್ಕ್‌ನ ಗಾಂಧಿ ಪ್ರತಿಮೆ ಎದುರು ಜಿಲ್ಲಾ ಕಾಂಗ್ರೆಸ್ ಧರಣಿ ಸತ್ಯಾಗ್ರಹ ನಡೆಸಿದೆ. ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರವನ್ನು ಖಂಡಿಸಿ, ತಪ್ಪಿತಸ್ಥರನ್ನು ಬಂಧಿಸಬೇಕಾದ ಸರ್ಕಾರ ತಪ್ಪಿತಸ್ಥರಿಗೆ ಬೆಂಬಲ ನೀಡುತ್ತಿದೆ. ಇಂತಹ ಸರ್ಕಾರ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಮಾಡುತ್ತಿದೆ. ಈ ಮೂಲಕ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಲಾಗಿದೆ. ಅಲ್ಲದೇ ದಲಿತ ಯುವತಿ ಮನೆಯವರನ್ನು ಬೆದರಿಸುವ ತಂತ್ರ ಮಾಡಲಾಗುತ್ತಿದೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಕೆಪಿಸಿಸಿ ವಕ್ತಾರ ಕೆ.ಬಿ.ಪ್ರಸನ್ನ ಕುಮಾರ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಜಿಲ್ಲಾಧಿಕಾರಿ ಕಚೇರಿ ಎದುರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಯೋಗಿ ಆದಿತ್ಯನಾಥ್ ಅವರಿಗೆ ಅಧಿಕಾರ ನಡೆಸಲು ಆಗುತ್ತಿಲ್ಲ. ಹಾಗಾಗಿ ಅಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಪಿಎಫ್ಐ ಜಿಲ್ಲಾಧ್ಯಕ್ಷ ರಿಜ್ವಾನ್, ಯುಪಿ ಸರ್ಕಾರ ಪಿಎಫ್ಐ ವಿರುದ್ಧ ಸುಮ್ಮನೆ ಆರೋಪ ಮಾಡುತ್ತಿದೆ. ಅವರು ನಮ್ಮ ವಿರುದ್ದ ಮಾಡಿರುವ ಆರೋಪ ನಿರಾಧಾರ ಎಂದರು.