ಶಿವಮೊಗ್ಗ:ಕೇಂದ್ರ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಕೈಗೊಂಡಿದ್ದು, ಸಾರ್ವಜನಿಕರು ಆಯೋಗದೊಂದಿಗೆ ಸಹಕರಿಸುವಂತೆ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ಮನವಿ ಮಾಡಿದರು.
ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವವನ್ನು ಭದ್ರಗೊಳಿಸಲು ಮತದಾನ ಒಂದು ಮಹತ್ತರ ಕಾರ್ಯವಾಗಿದ್ದು, ಪ್ರತಿಯೊಬ್ಬ ನಾಗರಿಕನೂ ಸಹ ನ್ಯಾಯಯುತವಾದ ಮತದಾನವನ್ನು ಬೆಂಬಲಿಸಬೇಕು ಎಂದರು .
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಇರುವ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಬೂತ್ ಮಟ್ಟದ ಅಧಿಕಾರಿಗಳಿಂದ ಮನೆಮನೆಗೆ ಭೇಟಿ ಕಾರ್ಯವನ್ನು ನವಂಬರ್ 18ರವರೆಗೆ ನಡೆಸಲಾಗುವುದು ಎಂದರು. ಈ ವೇಳೆ, ಆಧಾರ್ ಕಾರ್ಡ್, ಚಾಲನಾ ಪರವಾನಗಿ, ಪಡಿತರ ಚೀಟಿ, ಸರ್ಕಾರಿ ನೌಕರರ ಕಾರ್ಡ್ ಅಥವಾ ಚುನಾವಣಾ ಆಯೋಗ ಅನುಮೋದಿಸಿದ ಯಾವುದಾದರೂ ಒಂದು ದಾಖಲೆಯನ್ನು ನೀಡುವ ಮೂಲಕ ಪರಿಷ್ಕರಿಸಿಕೊಳ್ಳುವಂತೆ ಅವರು ತಿಳಿಸಿದರು.