ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಪಾಲಿಕೆ ಸದಸ್ಯರು ಪಕ್ಷಭೇದ ಮರೆತು ಆಗ್ರಹಿಸಿದರು.
ವಾರದೊಳಗೆ ನೀರಿನ ಸಮಸ್ಯೆ ಸರಿಪಡಿಸಿ: ಶಿವಮೊಗ್ಗ ಪಾಲಿಕೆ ಸದಸ್ಯರ ಆಗ್ರಹ - Shimoga municipality members demand
ಒಂದು ವಾರದೊಳಗೆ ಶಿವಮೊಗ್ಗ ನಗರದ ನೀರಿನ ಸಮಸ್ಯೆ ಸರಿಪಡಿಸುವಂತೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಸದಸ್ಯರು ಪಕ್ಷಭೇದ ಮರೆತು ಒತ್ತಾಯಿಸಿದ್ದಾರೆ.
ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯವೈಖರಿ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು, ಒಂದು ವಾರದೊಳಗೆ ನೀರಿನ ಸಮಸ್ಯೆ ಸರಿಪಡಿಸುವಂತೆ ಒತ್ತಾಯಿಸಿದರು. ಅನುದಾನ ಸೌಲಭ್ಯ ಸಮರ್ಪಕವಾಗಿ ತಲುಪಿಸಿದರೂ ಸಹ ನೀರು ಪೂರೈಕೆ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಇದರಿಂದ ಆಡಳಿತ ಪಕ್ಷಕ್ಕೆ ಕೆಟ್ಟ ಹೆಸರು ಬರುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜೊತೆಗೆ ನಗರದಲ್ಲಿ ವಿದ್ಯುತ್ ಸಮಸ್ಯೆ, ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ವಿಳಂಬದ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಪಾಲಿಕೆ ಆಯುಕ್ತರು ಸ್ಮಾರ್ಟ್ ಸಿಟಿ ಎಂಡಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಸಾರ್ವಜನಿಕರ ಕೈಗೆ ಸಿಗದೆ ತೊಂದರೆಯಾಗುತ್ತಿದೆ. ಹೀಗಾಗಿ ಸ್ಮಾರ್ಟ್ ಸಿಟಿಗೆ ಬೇರೆ ಆಯುಕ್ತರನ್ನು ನೇಮಿಸಲು ಮನವಿ ಸಲ್ಲಿಸುವಂತೆ ಒತ್ತಾಯಿಸಿದರು.