ಶಿವಮೊಗ್ಗ:2022ರ ಜೂನ್ ಅಂತ್ಯದ ವೇಳೆಗೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ನಡೆಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗ ತಾಲೂಕು ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿ ವೀಕ್ಷಣೆ ನಡೆಸಿ ನಂತರ ವಿಮಾನ ನಿಲ್ದಾಣದ ಎರಡನೇ ಹಂತದ ಟರ್ಮಿನಲ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದೆ. ಮುಂದಿನ ಜೂನ್ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಅಂತಹ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ವಿಮಾನ ನಿಲ್ದಾಣ ನಿರ್ಮಾಣದಿಂದ ಮಧ್ಯ ಕರ್ನಾಟಕದ ಜಿಲ್ಲೆಗಳ ಹೆಚ್ಚಿನ ಪ್ರಗತಿಗೆ ಸಹಾಯಕವಾಗಲಿದೆ.
ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಪ್ರಗತಿ ಸಾಧ್ಯವಾಗಲಿದೆ. ಹೆಚ್ಚಿನ ಕೈಗಾರಿಕೆಗಳು ಪ್ರಾರಂಭವಾಗಲು, ಯುವಕರಿಗೆ ಉದ್ಯೋಗ ಸೃಷ್ಟಿಯಾಗಲು ಸಹಾಯಕವಾಗುತ್ತದೆ ಎಂದರು. ರನ್ ವೇ ಕಾಮಗಾರಿ, ಸಂಪರ್ಕ ರಸ್ತೆ, ಪೆರಿಮೀಟರ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದರು.