ಶಿವಮೊಗ್ಗ:ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳ ಕಾಲ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.
ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಎದುರಾಗಬಹುದಾದ 316 ಗ್ರಾಮಗಳನ್ನು ಗುರುತಿಸಲಾಗಿದೆ. ಈ ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ತಾತ್ಕಾಲಿಕ ಕಾಮಗಾರಿಗಳನ್ನು ಕೈಗೊಳ್ಳುವ ಬದಲು ನೀರಿನ ಮೂಲವನ್ನು ಗುರುತಿಸಿ ಪೈಪ್‍ಲೈನ್ ಅಳವಡಿಕೆಯಂತಹ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಲು ಆದ್ಯತೆ ನೀಡಬೇಕು ಎಂದರು.
ಕುಡಿಯುವ ನೀರಿನ ಕುರಿತು ಪರಿಶೀಲನಾ ಸಭೆ.. ಗ್ರಾಮೀಣ ನೀರು ಪೂರೈಕೆ ಇಲಾಖೆ ಸೇರಿದಂತೆ ಎಲ್ಲಾ ಕುಡಿಯುವ ನೀರಿನ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಪ್ರಸ್ತುತ ಕಾಮಗಾರಿ ಪೂರ್ಣಗೊಂಡು ಪ್ರಾಯೋಗಿಕ ನೀರು ಪೂರೈಕೆ ನಡೆಯುತ್ತಿರುವ ಎಲ್ಲಾ 3 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಆದಷ್ಟು ಬೇಗ ಕಾರ್ಯಾರಂಭ ಮಾಡಬೇಕು ಎಂದರು.
ಟ್ಯಾಂಕರ್ ಸಾಫ್ಟ್‍ವೇರ್ :ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಟ್ಯಾಂಕರ್ ಸಾಫ್ಟ್‌ವೇರ್ ರೂಪಿಸಿದೆ. ಈ ಕುರಿತು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಮಾಹಿತಿ ಒದಗಿಸಬೇಕು. ಉಪವಿಭಾಗಾಧಿಕಾರಿ ಮಟ್ಟದಲ್ಲಿ ಟ್ಯಾಂಕರ್ ನೀರು ಸರಬರಾಜು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಕಳೆದ ವರ್ಷದ ಕುಡಿಯುವ ನೀರಿನ ಕಾಮಗಾರಿಗಳ ಬಿಲ್ ಪಾವತಿಗೆ ಬಾಕಿ ಇದ್ದರೆ ಅದನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದರು.