ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ ಅತಿವೃಷ್ಟಿ ಎದುರಿಸಲು ಮುಂಜಾಗ್ರತಾ ಕ್ರಮ : ಸಿಎಂಗೆ ಜಿಲ್ಲಾಧಿಕಾರಿ ಮಾಹಿತಿ

ಪ್ರಸ್ತುತ ಸಾಲಿನಲ್ಲಿ ಮಳೆಯಿಂದ ಮೂರು ಮಾನವ ಜೀವ ಹಾನಿಯಾಗಿವೆ. ಸಂತ್ರಸ್ತರಿಗೆ 15 ಲಕ್ಷ ರೂ. ಪರಿಹಾರ ನೀಡಲಾಗಿದೆ. 2 ಜಾನುವಾರುಗಳು ಮೃತಪಟ್ಟಿದ್ದು, 60 ಸಾವಿರ ರೂ. ನೀಡಲಾಗಿದೆ. 4 ಮನೆಗಳು ಶೇ.75ರಷ್ಟು ಹಾಗೂ 69ಮನೆಗಳು ಸ್ವಲ್ಪಮಟ್ಟಿನ ಹಾನಿಗೀಡಾಗಿವೆ. ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಲಾಗುವುದು..

conference
conference

By

Published : Jun 19, 2021, 3:44 PM IST

Updated : Jun 19, 2021, 3:49 PM IST

ಶಿವಮೊಗ್ಗ :ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದೆ. ಅತಿವೃಷ್ಟಿಯಿಂದ ಉಂಟಾಗಬಹುದಾದ ಅನಾಹುತಗಳನ್ನು ಎದುರಿಸಲು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ತಿಳಿಸಿದ್ದಾರೆ.

ಮುಂಗಾರು ಮಳೆ ಹಿನ್ನೆಲೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಂದು ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್​ನಲ್ಲಿ​ ಭಾಗವಹಿಸಿದ ಅವರು, ಜಿಲ್ಲೆಯಲ್ಲಿ ಅತಿವೃಷ್ಟಿ ಎದುರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕಳೆದ 18 ದಿನಗಳಲ್ಲಿ ಸರಾಸರಿಗಿಂತ ಶೇ.20 ರಷ್ಟು ಹೆಚ್ಚಿನ ಮಳೆಯಾಗಿದೆ. ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳಿಗೆ ಕಳೆದ ಒಂದು ವಾರದಿಂದ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ತುಂಗಾಭದ್ರಾ ಜಲಾಶಯ ಬಹುತೇಕ ತುಂಬಿದೆ. ಎಲ್ಲಾ ಜಲಾಶಯಗಳ ನೀರಿನ ಮಟ್ಟದ ಬಗ್ಗೆ ನಿರಂತರ ನಿಗಾವಹಿಸಲಾಗಿದೆ.

67 ಗ್ರಾಮ ಪಂಚಾಯತ್‍ಗಳ 163 ಗ್ರಾಮಗಳು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 74 ಪ್ರದೇಶಗಳು ಹಾಗೂ 18 ಮುಖ್ಯ ರಸ್ತೆಗಳನ್ನು ಅತಿವೃಷ್ಟಿಯಿಂದ ತೊಂದರೆ ಉಂಟಾಗಬಹುದಾದ ಸ್ಥಳಗಳೆಂದು ಗುರುತಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ಆರಂಭಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಕೊರತೆ ಇಲ್ಲ :ಜಿಲ್ಲೆಯಲ್ಲಿ26,459 ಕ್ವಿಂಟಲ್ ಬಿತ್ತನೆ ಬೀಜಕ್ಕೆ ಬೇಡಿಕೆ ಇದೆ. 30,242 ಕ್ವಿಂಟಲ್ ದಾಸ್ತಾನಿದೆ. ಎಲ್ಲಾ ಕಡೆ ಕೃಷಿ ಚಟುವಟಿಕೆ ಆರಂಭವಾಗಿದೆ. ಈಗಾಗಲೇ 3341 ಕ್ವಿಂಟಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ರಸಗೊಬ್ಬರವನ್ನು ಬೇಡಿಕೆಗೆ ಅನುಸಾರವಾಗಿ ಹಂತ ಹಂತವಾಗಿ ದಾಸ್ತಾನು ಮಾಡಲಾಗುತ್ತಿದೆ. ಜೂನ್ ಅಂತ್ಯದವರೆಗೆ 52ಸಾವಿರ ಮೆಟ್ರಿಕ್ ಟನ್ ವಿವಿಧ ರಸಗೊಬ್ಬರ ಬೇಡಿಕೆ ಇದೆ. 1.07 ಮೆಟ್ರಿಕ್ ಟನ್ ದಾಸ್ತಾನಿದೆ ಎಂದು ಮಾಹಿತಿ ನೀಡಿದ್ರು.

ಪ್ರಸ್ತುತ ಸಾಲಿನಲ್ಲಿ ಮಳೆಯಿಂದ ಮೂರು ಮಾನವ ಜೀವ ಹಾನಿಯಾಗಿವೆ. ಸಂತ್ರಸ್ತರಿಗೆ 15 ಲಕ್ಷ ರೂ. ಪರಿಹಾರ ನೀಡಲಾಗಿದೆ. 2 ಜಾನುವಾರುಗಳು ಮೃತಪಟ್ಟಿದ್ದು, 60 ಸಾವಿರ ರೂ. ನೀಡಲಾಗಿದೆ. 4 ಮನೆಗಳು ಶೇ.75ರಷ್ಟು ಹಾಗೂ 69ಮನೆಗಳು ಸ್ವಲ್ಪಮಟ್ಟಿನ ಹಾನಿಗೀಡಾಗಿವೆ. ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಅತಿವೃಷ್ಟಿಯಿಂದ ಮಾನವ ಜೀವ ಹಾನಿ ಹಾಗೂ ಜಾನುವಾರುಗಳಿಗೆ ಹಾನಿಯಾಗದಂತೆ ಗರಿಷ್ಠ ಎಚ್ಚರಿಕೆ ವಹಿಸಬೇಕು. ಜಾನುವಾರುಗಳಿಗೆ ಸಾಕಷ್ಟು ಮೇವು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಅಗತ್ಯವಿರುವ ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲು ವ್ಯವಸ್ಥೆ ಮಾಡಬೇಕು. ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಅತಿವೃಷ್ಟಿ ಪರಿಹಾರ ಕಾಮಗಾರಿಗಳಿಗೆ ಯಾವುದೇ ಅನುದಾನ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ.

ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇದೇ ವೇಳೆ ತಿಳಿಸಿದ್ರು. ಸಿಎಂ ಜೊತೆಗಿನ ವಿಡಿಯೋ ಸಂವಾದದ​ ವೇಳೆ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ ಎಲ್‌ ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Last Updated : Jun 19, 2021, 3:49 PM IST

ABOUT THE AUTHOR

...view details