ಶಿವಮೊಗ್ಗ: ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದ್ದು, ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳ ಸೌಲಭ್ಯಗಳನ್ನು ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಮುಖ ಖಾಸಗಿ ಆಸ್ಪತ್ರೆಯ ಪ್ರತಿನಿಧಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ ನೋಂದಣಿಯಾಗಿರುವ 21 ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ನೀಡುವ ಕುರಿತು ಸರ್ಕಾರ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಈ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‍ಗಳು ಸೇರಿದಂತೆ ವೈದ್ಯಕೀಯ ಸೌಲಭ್ಯಗಳ ಕುರಿತು ಮಾಹಿತಿಯನ್ನ ಗೂಗಲ್ ಶೀಟ್‍ನಲ್ಲಿ ನವೀಕರಿಸಬೇಕು. ಕೆಪಿಎಂಎ ವೈದ್ಯಾಧಿಕಾರಿಗಳ ತಂಡ ಈ ಎಲ್ಲ ಆಸ್ಪತ್ರೆಗಳಿಗೆ ಭೇಟಿ ನೀಡಿ ಬುಧವಾರದ ಒಳಗಾಗಿ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಇದುವರೆಗೆ 151 ಕೊರೊನಾ ಕೇಸ್ ದೃಢಪಟ್ಟಿದ್ದು, ಪ್ರಸ್ತುತ 45 ಮಂದಿ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿ ಬೆಡ್‍ಗಳನ್ನು 250 ಕ್ಕೆ ಹೆಚ್ಚಿಸಲಾಗುತ್ತಿದೆ. ಒಟ್ಟು 80 ವೆಂಟಿಲೇಟರ್ಗಳು ಸೇರಿದಂತೆ ಎಲ್ಲ ಅಗತ್ಯ ಮೂಲ ಸೌಲಭ್ಯ ಲಭ್ಯವಿದೆ ಎಂದರು.