ಶಿವಮೊಗ್ಗ :ಕೊರೊನಾ ಹಿನ್ನೆಲೆ ಕಾಲೇಜುಗಳು ಇನ್ನೂ ಸರಿಯಾಗಿ ಆರಂಭಗೊಳ್ಳದಿರುವುದರಿಂದ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಕುರಿತು ವಿಶೇಷ ಪ್ರಯತ್ನ ನಡೆಸಬೇಕು ಎಂದು ಶಿವಮೊಗ್ಗ ಜಿಲ್ಲೆ ಮತದಾರರ ಪಟ್ಟಿ ಪರೀಕ್ಷರಣೆ ಕಾರ್ಯದ ವೀಕ್ಷಕ ಉಜ್ವಲ್ ಕುಮಾರ್ ಘೋಷ್ ಸೂಚನೆ ನೀಡಿದ್ದಾರೆ.
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ಪರೀಕ್ಷರಣೆ ಕುರಿತಾಗಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯು ಮತ್ತು ಪದವಿ ಕಾಲೇಜುಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಪಟ್ಟಿಯನ್ನು ಪಡೆದುಕೊಳ್ಳಬೇಕು.
ಅದರಲ್ಲಿ ಮತದಾರರ ಪಟ್ಟಿಯಲ್ಲಿ ಇನ್ನೂ ಸೇರ್ಪಡೆಗೊಳ್ಳದಿರುವ ವಿದ್ಯಾರ್ಥಿಗಳನ್ನು ಗುರುತಿಸಬೇಕು. ಮತದಾರರ ಪಟ್ಟಿಗೆ ಸೇರಲು ಅರ್ಹರಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆಯಾ ಮತಗಟ್ಟೆ ಅಧಿಕಾರಿಗೆ ಸಲ್ಲಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕ್ರಮಕೈಗೊಳ್ಳಬೇಕು. ವಿದ್ಯಾರ್ಥಿಗಳು ಹೆಸರು ನೋಂದಾಯಿಸಲು ಅನುಕೂಲವಾಗುವಂತೆ ಅರ್ಜಿ ನಮೂನೆ-6 ಎಲ್ಲಾ ಕಾಲೇಜುಗಳಲ್ಲಿ ಲಭ್ಯವಿರಬೇಕು.
ಅರ್ಹ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಗೆ ಸೇರಿಸಿ :ಮುಂದಿನ ಒಂದು ತಿಂಗಳ ಅವಧಿಯಲ್ಲಿ ಎಲ್ಲಾ ಅರ್ಹ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಸಂದರ್ಭದಲ್ಲಿ ಕುಟುಂಬದ ಎಲ್ಲಾ ಸದಸ್ಯರೂ ಒಂದೇ ಮತಗಟ್ಟೆ ವ್ಯಾಪ್ತಿಯಲ್ಲಿ ನೋಂದಣಿಯಾಗುವಂತೆ ನೋಡಿಕೊಳ್ಳಬೇಕು.