ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಈ ಖಾಯಿಲೆ ಉಲ್ಬಣಗೊಳ್ಳದಂತೆ ವೈದ್ಯಾಧಿಕಾರಿಗಳು ಎಚ್ಚರವಹಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಕೊರೊನಾ ಪ್ರಕರಣ ಉಲ್ಬಣಗೊಳ್ಳದಂತೆ ಕ್ರಮ ವಹಿಸಿ: ಅಧಿಕಾರಿಗಳಿಗೆ ಬಿವೈಆರ್ ಸೂಚನೆ - ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ
ಶಿವಮೊಗ್ಗ ಜಿಲ್ಲಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚಳವಾಗದಂತೆ ಹಾಗೂ ಗ್ರಾಮೀಣ ಭಾಗದ ಜನರಿಗೆ ಉತ್ತಮ ಸೇವೆ ಸಲ್ಲಿಸುವಲ್ಲಿ ವೈದ್ಯಾಧಿಕಾರಿಗಳು ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಕಾಳಜಿ ವಹಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಶಿಕಾರಿಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದರು.
![ಕೊರೊನಾ ಪ್ರಕರಣ ಉಲ್ಬಣಗೊಳ್ಳದಂತೆ ಕ್ರಮ ವಹಿಸಿ: ಅಧಿಕಾರಿಗಳಿಗೆ ಬಿವೈಆರ್ ಸೂಚನೆ Program](https://etvbharatimages.akamaized.net/etvbharat/prod-images/768-512-9399838-759-9399838-1604306992515.jpg)
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಶಿಕಾರಿಪುರ ಇವರ ಸಂಯುಕ್ತಾಶ್ರಯದಲ್ಲಿ ಶಿಕಾರಿಪುರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನೂತನವಾಗಿ ಆರೋಗ್ಯ ರಕ್ಷಾ ಸಮಿತಿಗೆ ನಾಮ ನಿರ್ದೇಶಿತಗೊಂಡ ಸದಸ್ಯರಿಗೆ ಅಭಿನಂದನಾ ಹಾಗೂ ಕಾರ್ಯಾಗಾರದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ. ಗ್ರಾಮೀಣ ಪ್ರದೇಶದಲ್ಲಿ ಈ ಖಾಯಿಲೆ ಹೆಚ್ಚಾಗದಂತೆ ಹಾಗೂ ರೈತಾಪಿ ವರ್ಗದವರಿಗೆ ಉತ್ತಮ ಸೇವೆ ನೀಡುವಲ್ಲಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಶ್ರಮಿಸಬೇಕು ಎಂದು ಸೂಚಿಸಿದರು.
ಈ ಕಾರ್ಯಕ್ರಮದಲ್ಲಿ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ರೇವಣ್ಣಪ್ಪ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ರೇಣುಕಾ ಹನುಮಂತಪ್ಪ, ಡಿಹೆಚ್ಒ ಡಾ. ರಾಜೇಶ್ ಸುರಗೀಹಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.