ಶಿವಮೊಗ್ಗ: ರಾಜ್ಯ ಸರ್ಕಾರದ ಯೋಜನೆಗಳನ್ನು ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಅರ್ಹರಿಗೆ ತಲುಪಿಸುವ ಜವಾಬ್ದಾರಿ ನಮ್ಮ ಕಾರ್ಯಕರ್ತರ ಮೇಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಪಕ್ಷದ ಜನಪ್ರತಿನಿಧಿಗಳಿಗೆ ಹಾಗೂ ಕಾರ್ಯಕರ್ತರಿಗೆ ತಿಳಿಸಿದ್ದಾರೆ.
ಸಿಎಂ ಯಡಿಯೂರಪ್ಪ ಮಾತನಾಡಿದರು ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ನಡೆದ ವಿವಿಧ ಇಲಾಖೆಯ ಸೌಲಭ್ಯ ವಿತರಣಾ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪತ್ರ ವಿತರಿಸಿ ಮಾತನಾಡಿದ ಅವರು, ಪ್ರತಿಯೊಬ್ಬರ ಮನೆ ಮನೆಗೂ ಹಕ್ಕುಪತ್ರ ತಲುಪಿಸಲಾಗುವುದು, ಸೌಲಭ್ಯ ನೀಡುವಾಗ ಮಧ್ಯವರ್ತಿಗಳು ಹಣಕ್ಕೆ ಬೇಡಿಕೆ ಇಟ್ಟರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡುವಂತೆ ತಿಳಿಸಿದರು.
ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿಯನ್ನು ಸುಸ್ಥಿರಗೊಳಿಸುವುದು ಸರ್ಕಾರದ ಗುರಿಯಾಗಿದೆ. ತಾಲೂಕಿನಲ್ಲಿ ಮೆಕ್ಕೆಜೋಳ ಬೆಳೆ ಉತ್ತಮವಾಗಿ ಬಂದಿದೆ. ಜೋಳದ ಕಾಳು ಬಿಡಿಸುವ ಯಂತ್ರವನ್ನು ರೈತರಿಗೆ ಸಬ್ಸಿಡಿ ದರದಲ್ಲಿ ಒದಗಿಸಲಾಗುವುದು. ಇದಕ್ಕಾಗಿ ಶಿಕಾರಿಪುರಕ್ಕೆ 1.40 ಕೋಟಿ ರೂ ನಿಗದಿಪಡಿಸಲಾಗಿದೆ ಎಂದರು.
ಇದಕ್ಕೂ ಮುನ್ನ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿಕಾರಿಪುರ ತಾಲೂಕಿನ 14 ಗ್ರಾಮ ಪಂಚಾಯತ್ ವ್ಯಾಪ್ತಿಯ 403 ಫಲಾನುಭವಿಗಳಿಗೆ ಇಂದು ಹಕ್ಕುಪತ್ರ ವಿತರಿಸಲಾಗುತ್ತಿದೆ. ಮುಂದಿನ ಒಂದೆರಡು ದಿನಗಳಲ್ಲಿ 13 ಗ್ರಾಮ ಪಂಚಾಯತ್ ನ 1 ಸಾವಿರ ಜನರಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ತಿಳಿಸಿದರು.