ಶಿವಮೊಗ್ಗ :ಶರಾವತಿ ಸಂತ್ರಸ್ತರ ಆತಂಕ ನಿವಾರಣೆಗಾಗಿ ರಾಜ್ಯ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಅವರು ಆಗ್ರಹಿಸಿದರು.
ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಶರಾವತಿ ಸಂತ್ರಸ್ತರಿಗೆ ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಪರಿಸರವಾದಿಯೊಬ್ಬರ ಅರ್ಜಿಗೆ ನ್ಯಾಯಾಲಯ ತೀರ್ಪು ನೀಡಿದೆ. ಆದರೆ ಸರ್ಕಾರ ಈ ತನಕ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿಲ್ಲ ಎಂದು ಆರೋಪಿಸಿದರು.
ಕಾಗೋಡು ತಿಮ್ಮಪ್ಪ ಅವರು ಸಚಿವರಾಗಿದ್ದಾಗ ಹಕ್ಕುಪತ್ರ ಕೊಡಿಸಿದ್ದರು. ಆದರೆ ಆ ಹಕ್ಕುಪತ್ರವನ್ನು ತಿರಸ್ಕರಿಸಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಯಾರಿಗೂ ಹಕ್ಕುಪತ್ರ ಕೊಡಿಸಲಿಲ್ಲ. ಈಗ ಶರಾವತಿ ಸಂತ್ರಸ್ತರು ನೆಲೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ ಎಂದು ಹೇಳಿದರು.
ಸರ್ಕಾರಕ್ಕೆ ರೈತ ಬಗ್ಗೆ ಮಾತನಾಡುವ ಹಕ್ಕಿಲ್ಲ : ಕಬಿನಿ ಜಲಾಶಯ ನಿರ್ಮಾಣವಾದಾಗ 35 ಸಾವಿರ ಜನ ಸಂತ್ರಸ್ತರಾದರು. ಅವರಿಗೆ ಪರಿಹಾರ ನೀಡಿ, ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಇಲ್ಲಿ ಮಾದರಿ ಗ್ರಾಮಗಳನ್ನು ನಿರ್ಮಿಸಲಾಗಿದೆ. ಇಲ್ಲಿ ಹಕ್ಕುಪತ್ರವನ್ನೇ ಕೊಡಲು ಸಾಧ್ಯವಾಗಿಲ್ಲ. ಬಿಜೆಪಿ ಸರ್ಕಾರಕ್ಕೆ ರೈತರ ಬಗ್ಗೆ ಮಾತನಾಡಲು ಹಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮತದಾರರನ್ನು ತೆಗೆಯಲಾಗಿದೆ: ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಮಾತನಾಡಿದ ಅವರು, ಚಿಲುಮೆ ಎನ್ನುವ ಸಂಸ್ಥೆಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ ನೀಡಿದ್ದರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪರ ಮತದಾರರ ಹೆಸರನ್ನು ತೆಗೆಯಲಾಗಿದೆ. ಕಾಂಗ್ರೆಸ್ ಪರ ಮತದಾರರ ಹೆಸರನ್ನು ತೆಗೆದು, ಬಿಜೆಪಿ ಮತದಾರರ ಹೆಸರನ್ನು ಸೇರಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಅಲ್ಲದೆ ಕೇಂದ್ರ ಚುನಾವಣಾ ಸಮಿತಿಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ದೂರು ನೀಡಿದ ಪರಿಣಾಮ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ ಎಂದರು.
ಎಲ್ಲಾ ರಂಗದಲ್ಲೂ ಸರ್ಕಾರ ವಿಫಲ: ಈ ಪ್ರಕರಣದಲ್ಲಿ ಸರ್ಕಾರ ನೇರವಾಗಿ ಭಾಗಿಯಾಗಿದೆ. ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದರೆ ಆಡಳಿತದ ವೈಫಲ್ಯ ಯಾವ ರೀತಿ ಇದೆ ಎಂಬುದನ್ನು ತಿಳಿಯಬಹುದು. ತಮ್ಮ ತಪ್ಪುಗಳನ್ನು ಮುಚ್ಚಿ ಹಾಕಲು ನಿಜವಾದ ಮತದಾರರ ಹಕ್ಕನ್ನು ಕಸಿಯುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಎಲ್ಲಾ ರಂಗಗಳಲ್ಲೂ ಸರ್ಕಾರ ವಿಫಲವಾಗಿದೆ. ಹಾಗಾಗಿ ಇದರ ಹೊಣೆಯನ್ನು ಮುಖ್ಯಮಂತ್ರಿಗಳು ಹೊರಬೇಕು ಹಾಗೂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ :ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲವಾಗಿದೆ : ವಿ ಎಸ್ ಉಗ್ರಪ್ಪ