ಶಿವಮೊಗ್ಗ: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದು ಹಾಕುವುದು ಸೇರಿದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ರಾಜಕೀಯ ಪಕ್ಷಗಳು ಮತಗಟ್ಟೆ ಏಜೆಂಟರಿಗೆ ತಾಲೂಕು ಹಂತದಲ್ಲಿ ತರಬೇತಿ ಆಯೋಜಿಸಿದರೆ ಜಿಲ್ಲಾಡಳಿತದಿಂದ ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಉಜ್ವಲ್ ಕುಮಾರ್ ಘೋಷ್ ಹೇಳಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮತಗಟ್ಟೆ ಏಜೆಂಟ್ಗಳಿಗೆ ತರಬೇತಿ - Shimoga District Voter List
ಮತದಾರರ ಪಟ್ಟಿಯಲ್ಲಿ ಯುವ ವಿದ್ಯಾರ್ಥಿ ಮತದಾರರನ್ನು ಸೇರ್ಪಡೆಗೊಳಿಸಲು ವ್ಯವಸ್ಥಿತ ಕ್ರಮ ಕೈಗೊಳ್ಳಬೇಕು. ಪ್ರತಿಯೊಂದು ಕಾಲೇಜುಗಳಲ್ಲಿ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡುವ ಅರ್ಜಿ ಲಭ್ಯವಿದ್ದು, ಪ್ರತಿಯೊಬ್ಬರ ನೋಂದಣಿಯಾಗಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಉಜ್ವಲ್ ಕುಮಾರ್ ಘೋಷ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಿರುವವರ ಹೆಸರು ಮಾತ್ರವಲ್ಲದೆ, ತೆಗೆದು ಹಾಕಲಾಗಿರುವ ಹೆಸರುಗಳ ಪಟ್ಟಿ ಸಹ ಪ್ರಕಟಿಸಲಾಗುತ್ತಿದೆ. ಈ ಪಟ್ಟಿಯನ್ನು ವೆಬ್‍ಸೈಟ್‍ನಲ್ಲಿ ಸಹ ಪ್ರಕಟಿಸಲು ಪ್ರಯತ್ನಿಸಲಾಗುವುದು. ಮತದಾರರ ಪಟ್ಟಿಯಿಂದ ಹೆಸರು ತೆಗೆಯುವ ಸಂದರ್ಭದಲ್ಲಿ ಜಾಗರೂಕತೆ ವಹಿಸಬೇಕು. ಮೃತಪಟ್ಟವರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು. ಇದೇ ರೀತಿ ಮದುವೆಯಾಗಿ ಬೇರೆ ಕಡೆ ಹೋಗಿರುವವರು, ವಿಳಾಸ ಬದಲಾವಣೆ ಮಾಡಿರುವವರನ್ನು ಸರಿಯಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯ ಮತದಾರರ ಕರಡು ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿಗೆ ಡಿಸೆಂಬರ್ 17ರವರೆಗೆ ಸಮಯ ನಿಗದಿಪಡಿಸಲಾಗಿತ್ತು. ಜನವರಿ 18ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ. ಕರಡು ಪಟ್ಟಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 14,54,201 ಮತದಾರರು ಇದ್ದಾರೆ. ಇವರಲ್ಲಿ 722144 ಪುರುಷ ಹಾಗೂ 732057 ಮಹಿಳಾ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾಹಿತಿ ನೀಡಿದರು.