ಶಿವಮೊಗ್ಗ, :ಸರಕು ಸಾಗಾಣಿಕೆ ವಾಹನದಲ್ಲಿ ಕಾರ್ಮಿಕರನ್ನು ಹಾಗೂ ಶಾಲಾ ಮಕ್ಕಳನ್ನು ನಿಯಮ ಬಾಹಿರವಾಗಿ ಸಾಗಾಟ ಮಾಡುವುದನ್ನ ಸಂಪೂರ್ಣವಾಗಿ ನಿರ್ಬಂಧಿಸಿ ರಾಜ್ಯ ಹೈಕೋರ್ಟ್ ಆದೇಶ ಹೊರಡಿಸಿದ್ದು, ಇದನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಆನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಆದೇಶ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಶಾಲಾ ಆಡಳಿತ ಮಂಡಳಿ, ಖಾಸಗಿ ಸಾರಿಗೆ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಈ ಕುರಿತು ಸೂಚನೆ ನೀಡಿದರು. ಕೈಗಾರಿಕಾ ವಲಯಗಳಲ್ಲಿ , ಕಾಮಗಾರಿ ಕಾರ್ಯಗಳಲ್ಲಿ ತೊಡಗಿರುವ ಕೂಲಿ ಕಾರ್ಮಿಕರು ಮತ್ತು ಕೃಷಿ ಚಟುವಟಿಕೆಗಳಿಗಾಗಿ ಕಾರ್ಮಿಕರನ್ನ ಸರಕು ಸಾಗಾಣಿಕಾ ವಾಹನಗಳಲ್ಲಿ ತುಂಬಿಸಿ ಸಾಗಾಟ ಮಾಡುವುದನ್ನ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದರು.
ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಅನಧಿಕೃತ ವಾಹನಗಳಲ್ಲಿ ಕರೆದುಕೊಂಡು ಹೋಗುವುದನ್ನು ಸಹ ನಿರ್ಬಂಧಿಸಲಾಗಿದ್ದು, ಇನ್ನು ಮುಂದೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿರುವ ವಾಹನಗಳಲ್ಲಿ ಮಾತ್ರ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಬಹುದಾಗಿದೆ. ಖಾಸಗಿ ವಾಹನಗಳಲ್ಲಿ ಸೀಟು ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರ ವಿದ್ಯಾರ್ಥಿಗಳನ್ನು ಕರೆದು ಹೋಗಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದರು.
ಮಾಚೇನಹಳ್ಳಿಯಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಪ್ರತಿ ನಿತ್ಯ 70 ರಿಂದ 80 ಅನಧಿಕೃತ ವಾಹನಗಳಲ್ಲಿ ಕಾರ್ಮಿಕರನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಇನ್ನು ಮುಂದೆ ಯಾವುದೇ ಕೈಗಾರಿಕಾ ಪ್ರದೇಶಗಳಲ್ಲಿ ಇಂತಹ ಸಾಗಾಟ ಮಾಡಿದರೆ ಕಾನೂನು ಕ್ರಮಕೈಗೊಳ್ಳಲಾಗುವುದು. ಕಾರ್ಮಿಕರ ಪ್ರಯಾಣಕ್ಕಾಗಿ ಕೈಗಾರಿಕಾ ಸಂಸ್ಥೆಗಳು ಕೆ.ಎಸ್.ಆರ್.ಟಿ.ಸಿ ಬಸ್‍ಗಳನ್ನು ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.