ಶಿವಮೊಗ್ಗ:ಮುಂಬರುವ ಅಧಿವೇಶನದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಮಹರ್ಷಿ ವಾಲ್ಮೀಕಿ ಗುರುಪೀಠ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ನಾಯಕ ವಾಲ್ಮೀಕಿ ಸಮಾಜ ಪ್ರತಿಭಟನೆ ನಡೆಸಿತು.
ಶೇ.7.5 ರಷ್ಟು ಮೀಸಲಾತಿಗೆ ಒತ್ತಾಯಿಸಿ ವಾಲ್ಮೀಕಿ ಸಮುದಾಯ ಪ್ರತಿಭಟನೆ
ವಿಧಾನಸಭಾ ಅಧಿವೇಶನದ ವೇಳೆ ವಾಲ್ಮೀಕಿ ಸಮುದಾಯಕ್ಕೆ ಶೇ. 7.5 ರಷ್ಟು ಮೀಸಲಾತಿ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಶಿವಮೊಗ್ಗದಲ್ಲಿ ವಾಲ್ಮೀಕಿ ಸಮುದಾಯ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ್ದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ನೀಡಿರುವ ಮೀಸಲಾತಿಯಂತೆ ರಾಜ್ಯ ಸರ್ಕಾರವು ಶೇ.7.5 ರಷ್ಟು ಮೀಸಲಾತಿ ಘೋಷಣೆ ಮಾಡಬೇಕು. ರಾಜ್ಯದಲ್ಲಿ ವಾಲ್ಮೀಕಿ ಸಮುದಾಯದವರು ಸುಮಾರು 50 ಲಕ್ಷಕ್ಕೂ ಹೆಚ್ಚು ಮಂದಿ ಇದ್ದು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ದೊರೆಯದೆ ಶೇ. 3ರಷ್ಟು ಮಾತ್ರ ಮೀಸಲಾತಿ ಸಿಗುತ್ತಿದೆ. ಹಾಗಾಗಿ ಸಂವಿಧಾನದ ಆಶಯದಂತೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು.
ಇನ್ನು, ನ್ಯಾ.ನಾಗಮೋಹನ್ ದಾಸ್ ವರದಿಯನ್ನು ಸರ್ಕಾರ ಅಂಗೀಕರಿಸಬೇಕು, ಹಾಗೂ ಉದ್ಯೋಗ ಮತ್ತು ವಿದ್ಯಾಭ್ಯಾಸದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು. ಈ ಕುರಿತು ವಿಧಾನಸಭಾ ಅಧಿವೇಶನದಲ್ಲಿ ಶೇ.7.5 ರಷ್ಟು ಮೀಸಲಾತಿ ಘೋಷಣೆ ಮಾಡಬೇಕು ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು.