ಶಿವಮೊಗ್ಗ: ಭವಿಷ್ಯದ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ಕರ್ನಾಟಕ ರಾಜ್ಯಕ್ಕೆ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಮೂಲಸೌಕರ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಹೇಳಿದರು.
ಸಹ್ಯಾದ್ರಿ ಕಾಲೇಜಿನಲ್ಲಿ ಸುಮಾರು 5 ಕೋಟಿ ರೂ. ವೆಚ್ಚದ ಒಳ ಕ್ರೀಡಾಂಗಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾದ ಉತ್ತಮ ವಾತಾವರಣವಿದೆ. ಕ್ರೀಡಾ ಚಟುವಟಿಕೆಗಳ ಉತ್ತೇಜನಕ್ಕಾಗಿ ರಾಜ್ಯ ಸರ್ಕಾರ ಮುಂದಿಟ್ಟಿರುವ ಎಲ್ಲ ಬೇಡಿಕೆಗಳನ್ನು ಒಂದೊಂದಾಗಿ ಈಡೇರಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯನ್ನು ಕರ್ನಾಟಕದಲ್ಲಿ ಮಾತ್ರವಲ್ಲದೆ ದೇಶದಲ್ಲೇ ಉತ್ತಮ ಕ್ರೀಡಾ ಕೇಂದ್ರವಾಗಿ ರೂಪಿಸಲು ಎಲ್ಲ ನೆರವು ಒದಗಿಸಲಾಗುವುದು. ಮುಂದಿನ ಒಲಂಪಿಕ್ಸ್ನಲ್ಲಿ ಕರ್ನಾಟಕದಿಂದ ಹೆಚ್ಚಿನ ಚಿನ್ನದ ಪದಕದ ನಿರೀಕ್ಷೆ ಹೊಂದಿರುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಮ್ಮ ದೇಶದಲ್ಲಿ ವಿಶ್ವದಲ್ಲೇ ಅತಿ ಹೆಚ್ಚಿನ ಸಂಖ್ಯೆಯ ಯುವ ಜನಸಂಖ್ಯೆಯಿದೆ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗಳನ್ನು ಮಾಡಲು ವಿಪುಲ ಅವಕಾಶಗಳಿವೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಖೇಲೋ ಇಂಡಿಯಾ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಇದರ ಗರಿಷ್ಠ ಪ್ರಯೋಜನವನ್ನು ಯುವ ಜನಾಂಗ ಪಡೆದುಕೊಳ್ಳಬೇಕು ಎಂದು ಹೇಳಿದರು.