ಕರ್ನಾಟಕ

karnataka

ETV Bharat / state

ಕ್ವಾರಂಟೈನ್​​ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ: ಶಿವಮೊಗ್ಗ ಜಿಲ್ಲಾಧಿಕಾರಿ - ಕ್ವಾರಂಟೈನ್ ಉಲ್ಲಂಘಿಸಿದರೆ ಕಠಿಣ ಕ್ರಮ

ಇಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹಿರಿಯ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಕ್ವಾರಂಟೈನ್​​ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದರು.

DC KB Shivakumar meeing
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್​ ನೇತೃತ್ವದ ಸಭೆ

By

Published : Jul 9, 2020, 3:48 PM IST

ಶಿವಮೊಗ್ಗ: ಕ್ವಾರಂಟೈನ್​​ ಮಾರ್ಗಸೂಚಿಯನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್​ ನೇತೃತ್ವದಲ್ಲಿ ಸಭೆ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ಸೂಚನೆಗಳನ್ನು ನೀಡಿದರು.

ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ಮಾರ್ಗಸೂಚಿ ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಹೋಂ ಕ್ವಾರಂಟೈನ್ ಉಲ್ಲಂಘನೆಯ ಪ್ರಥಮ ಪ್ರಕರಣದಲ್ಲಿಯೇ ಎಫ್‍ಐಆರ್ ದಾಖಲಿಸಬೇಕು. ಮೂರನೇ ಬಾರಿ ಉಲ್ಲಂಘಿಸಿದರೆ ಐಪಿಸಿ 107ರ ಅಡಿ ಪ್ರಕರಣ ದಾಖಲಿಸಿ ಕ್ರಮ ಜರುಗಿಸಬೇಕು ಎಂದು ತಹಶೀಲ್ದಾರ್​ಗಳಿಗೆ ತಿಳಿಸಿದರು.

ಮಾಸ್ಕ್ ಧರಿಸುವುದು, ಭೌತಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಭೌತಿಕ ಅಂತರವನ್ನು ಕಾಯ್ದುಕೊಳ್ಳದೆ ವ್ಯಾಪಾರ-ವಹಿವಾಟು ನಡೆಸುತ್ತಿದ್ದರೆ ಅಂತಹ ಅಂಗಡಿಯವರಿಗೆ ದಂಡ ವಿಧಿಸಬೇಕು. ಮಾಸ್ಕ್ ಧರಿಸುವುದರ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲೂ ಅರಿವು ಮೂಡಿಸಿ, ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವ ಪ್ರಕ್ರಿಯೆ ಆರಂಭಿಸಬೇಕು. ಜನರು ಸೇರುವಂತಹ ಪ್ರದೇಶಗಳಲ್ಲಿ ಧ್ವನಿವರ್ಧಕಗಳ ಮೂಲಕ ನಿರಂತರವಾಗಿ ಅರಿವು ಮೂಡಿಸುವ ಕಾರ್ಯ ನಡೆಸಬೇಕೆಂದು ಸೂಚಿಸಿದರು.

ಮಾಹಿತಿ ನೀಡುವುದು ಕಡ್ಡಾಯ:

ಯಾವುದೇ ಕಾರಣಕ್ಕೂ ಕಲ್ಯಾಣ ಮಂಟಪಗಳಲ್ಲಿ ಮದುವೆ ನಡೆಸಲು ಅವಕಾಶ ನೀಡಬಾರದು. ಮನೆಯಲ್ಲಿ ಕೇವಲ 50 ಮಂದಿ ಮಿತಿಗೆ ಒಳಪಟ್ಟು ಮದುವೆ ನಡೆಸಲು ಸ್ಥಳೀಯ ಸಂಸ್ಥೆಯಿಂದ ಅನುಮತಿ ಪಡೆದಿರಬೇಕು. ಕಡ್ಡಾಯವಾಗಿ ಮದುವೆಯಲ್ಲಿ ಭಾಗವಹಿಸಿದವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯನ್ನು ಸ್ಥಳೀಯಾಡಳಿತಕ್ಕೆ ಸಲ್ಲಿಸಬೇಕು. ಜಾತ್ರೆ, ಸಂತೆಗಳಿಗೆ ಅನುಮತಿ ನೀಡಬಾರದು ಎಂದು ಸ್ಪಷ್ಟಪಡಿಸಿದರು.

ಸೌಲಭ್ಯ ಹೆಚ್ಚಳ:

ಗಾಜನೂರಿನಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಈಗಾಗಲೇ ರೋಗ ಲಕ್ಷಣಗಳಿಲ್ಲದ ಕೊರೊನಾ ಪಾಸಿಟಿವ್ ವ್ಯಕ್ತಿಗಳಿಗೆ ಸೌಲಭ್ಯ ಕಲ್ಪಿಸಲಾಗಿದೆ. ಇಲ್ಲಿ ಇನ್ನೂ ಹೆಚ್ಚುವರಿಯಾಗಿ 60 ಬೆಡ್​​​ಗಳ ವ್ಯವಸ್ಥೆಯನ್ನು ತಕ್ಷಣ ಕಲ್ಪಿಸಬೇಕು. ಮೆಗ್ಗಾನ್‍ನಲ್ಲಿ ಸಹ ಹಾಸಿಗೆ ಸಾಮರ್ಥ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ರೋಗ ಲಕ್ಷಣವಿರುವ ವ್ಯಕ್ತಿಗಳ ಸ್ಯಾಂಪಲ್ ಸಂಗ್ರಹಿಸಲು ಹೆಚ್ಚಿನ ಆದ್ಯತೆ ನೀಡಬೇಕೆಂದರು.

ತಾಲೂಕು ಮಟ್ಟದ ಸಮಿತಿ:

ಜಿಲ್ಲಾ ಮಟ್ಟದ ಸರ್ವೇಕ್ಷಣಾ ಸಮಿತಿ ರೀತಿಯಲ್ಲಿ ತಾಲೂಕು ಮಟ್ಟದಲ್ಲಿ ಸಹ ತಹಶೀಲ್ದಾರ್ ನೇತೃತ್ವದಲ್ಲಿ ಸಮಿತಿ ರಚಿಸಬೇಕು. ಇದೇ ರೀತಿ ಗ್ರಾಮ, ವಾರ್ಡ್ ಮತ್ತು ಬೂತ್ ಮಟ್ಟದಲ್ಲಿ ಕಾರ್ಯ ಪಡೆಯನ್ನು ತಕ್ಷಣ ರಚಿಸಿ ವರದಿಯನ್ನು ಸಲ್ಲಿಸಬೇಕೆಂದು ಸೂಚಿಸಿದರು.

ABOUT THE AUTHOR

...view details